ಜಿಲ್ಲೆ

ಹೆಣ್ಣು-ಗಂಡೆಂಬ ತಾರತಮ್ಯ ಬೇಡ

ಗದಗ: ಹೆಣ್ಣು ಅಬಲೆಯಲ್ಲ, ಸಬಲೆ. ಗಂಡು ಮಗುವಿನಂತೆ ಹೆಣ್ಣು ಮಗುವಿಗೂ ಹೆಚ್ಚು ಪ್ರಾಶಸ್ತ್ಯ ನೀಡಬೇಕು. ಹೆಣ್ಣು-ಗಂಡೆಂಬ ತಾರತಮ್ಯ ಮಾಡದೆ ಇಬ್ಬರನ್ನೂ ಸಮನಾಗಿ ಕಾಣಬೇಕು ಎಂದು ಜಿಪಂ ಸಿಇಒ ಡಾ.ಆನಂದ ಕೆ. ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ಸುಂದರೇಶಬಾಬು ಮಾತನಾಡಿ, ಹಿಂದೆ ಇದ್ದ ಪುರುಷ ಪ್ರಧಾನ ಸಮಾಜದಿಂದ ಮುಕ್ತಿ ಹೊಂದಿ ಪ್ರಸ್ತುತ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆ ಅನುಷ್ಠಾನಗೊಳಿಸಿದೆ ಎಂದರು.

ಕುಟುಂಬದ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಬಹುಮಖ್ಯವಾಗಿದ್ದು, ಹೆಣ್ಣು ಮಗುವೆಂಬ ಕೀಳರಿಮೆಯಿಂದ ಹೊರಬರಬೇಕು. ಹೆಣ್ಣು ಮಗು ಉಳಿಸಿ ಪ್ರೋತ್ಸಾಹಿಸಲು ಸಾರ್ವಜನಿಕರು ಕೈಜೋಡಿಸಬೇಕು ಎಂದರು.

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ: ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವುದು ಶ್ಲಾಘನೀಯ. ಪ್ರತಿ ಹೆಣ್ಣು ಮಗುವಿಗೂ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾನ ಅವಕಾಶ ಕಲ್ಪಿಸಿ ಉತ್ತೇಜನ ನೀಡಬೇಕು. ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ಸಮಾಜದಲ್ಲಿ ಹೆಣ್ಣು ಮಗುವಿನ ಬಗ್ಗೆ ಇರುವ ತಪ್ಪು ಕಲ್ಪನೆಗಳಿಂದ ಜನರು ಹೊರಬರಬೇಕು ಎಂದು ಜಿಪಂ ಸಿಇಒ ಡಾ.ಆನಂದ ಕೆ. ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ ಮಾತನಾಡಿ, ಈ ಬಾರಿಯ ಘೊಷವಾಕ್ಯ ‘ಹೆಣ್ಣು ಮಕ್ಕಳು ನನ್ನ ಧ್ವನಿ’ ಎಂಬುದಾಗಿದೆ. ಹೆಣ್ಣು ಮಕ್ಕಳನ್ನು ಪೋಷಿಸುವ ಮೂಲಕ ಹೆಣ್ಣು ಜೀವ ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ. ಮಾತನಾಡಿ, ಹೆಣ್ಣು ಮಗುವಿನ ಜನನ ಪ್ರಮಾಣ ಹೆಚ್ಚಿಸುವುದಕ್ಕಾಗಿ 2008-09ನೇ ಸಾಲಿನಿಂದ ಅಭಿಯಾನ ಆರಂಭಿಸಲಾಗಿದೆ ಎಂದರು.

ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಹೆಣ್ಣು ಮಗುವಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ಹೆಣ್ಣು ಮಕ್ಕಳ ಉಳಿವಿಗಾಗಿ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದರು.

ಹೆಣ್ಣು ಮಗುವಿನ ಪೋಷಣೆ, ಶಿಕ್ಷಣ, ವೈದ್ಯಕೀಯ ಆರೈಕೆ, ಬಾಲ್ಯ ವಿವಾಹಗಳ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು. ಅಲ್ಲದೆ, ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ಣುಡಿಯಂತೆ ಪ್ರತಿ ಹೆಣ್ಣು ಮಗುವಿಗೂ ಶಿಕ್ಷಣ ನೀಡಬೇಕು ಎಂದು ವಿದ್ಯಾರ್ಥಿನಿಯರಾದ ದೀಪಾ ಹಿರೇಮಠ ಹಾಗೂ ಪೂರ್ಣಿಮಾ ಸವದತ್ತಿಮಠ ಅಭಿಪ್ರಾಯ ಹಂಚಿಕೊಂಡರು.

ಜಿಲ್ಲಾ ಆರ್​ಸಿಎಚ್ ಅಧಿಕಾರಿ ಡಾ.ಬಿ.ಎಂ. ಗೊಜನೂರ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಎಚ್.ಎಚ್. ಕುಕನೂರ, ವಯಸ್ಕರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ್ ಮತ್ತಿತರರು ಇದ್ದರು.