ಚಿತ್ರದುರ್ಗ: ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದಿರುವ ತಪ್ಪಿತಸ್ಥರನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಒಳಪಡಿಸುವಂತೆ ಹಾಗೂ ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಕಾರ‌್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ಒನಕೆ ಓಬವ್ವ ವೃತ್ತದಲ್ಲಿ ಧರಣಿ ಕುಳಿತ ಪ್ರತಿಭಟನಾನಿರತರು, ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ಜಾಸ್ತಿಯಾಗುತ್ತಿದ್ದು, ಅವರಿಗೆ ರಕ್ಷಣೆ ಇಲ್ಲದಂತಾಗಿದೆ. ಇಂತಹ ಪ್ರಕರಣಗಳು ಇನ್ನು ಮುಂದೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಅಧ್ಯಕ್ಷ ಎನ್.ಅರುಣ್‌ಕುಮಾರ್, ಅಶೋಕ್ ಕನ್ನಡಿಗ, ಸ್ವಾಮಿ, ಲಕ್ಷ್ಮಿ, ರವಿಕುಮಾರ್‌ನಾಯ್ಕ, ಓಬಳೇಶ್ ಯಾದವ್, ಸುವರ್ಣಾ, ಬಸಣ್ಣ, ಓಬಣ್ಣ, ರೇಣುಕಾ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.