ಜಿಲ್ಲೆ

ಹೆದ್ದಾರಿ ವಾಹನ ಸಂಚಾರ ತಡೆದು ರೈತರ ಆಕ್ರೋಶ

ಪಾಂಡವಪುರ: ಕಾವೇರಿ ನದಿಯಿಂದ ತಮಿಳುನಾಡಿಗೆ ಸರ್ಕಾರ ನೀರು ಹರಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಶ್ರೀರಂಗಪಟ್ಟಣ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಬುಧವಾರ ಪ್ರತಿಭಟನೆ ನಡೆಸಿದರು.


ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಅಣೆಕಟ್ಟೆಗಳು ನಿರೀಕ್ಷಿತ ಮಟ್ಟದಲ್ಲಿ ಭರ್ತಿಯಾಗದೆ ರೈತರು ಪ್ರಸಕ್ತ ಹಂಗಾಮಿನ ಬೆಳೆ ಬೆಳೆಯಲು ಮೀನಮೇಷ ಎಣಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕೆಆರ್‌ಎಸ್ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ಕಟ್ಟು ಪದ್ಧತಿಯಡಿ ನೀರು ಹರಿಸಲು ಯೋಚಿಸಬೇಕಾದ ಸ್ಥಿತಿಯಲ್ಲಿ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹವಿದೆ. ಇಂತಹ ಸಂಕಷ್ಟಕರ ಪರಿಸ್ಥಿತಿಯಲ್ಲಿ ರಾಜ್ಯದ ರೈತರ ಹಿತವನ್ನು ಕಡಗಣಿಸಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಇದು ರಾಜ್ಯ ಸರ್ಕಾರ ರೈತರಿಗೆ ಮಾಡುತ್ತಿರುವ ದ್ರೋಹವಾಗಿದೆ. ಅಣೆಕಟ್ಟೆಯಲ್ಲಿ ಸದ್ಯ ಲಭ್ಯವಿರುವ ನೀರಿನ ಸಂಗ್ರಹ ಮತ್ತು ಅದರ ಅಗತ್ಯತೆಗಳನ್ನು ತಮಿಳುನಾಡಿನ ಸರ್ಕಾರ ಮತ್ತು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟು ತಕ್ಷಣ ಅಣೆಕಟ್ಟೆಯಿಂದ ನೀರು ಹರಿಸುವುದನ್ನು ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.


ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ಮತ್ತು ಸರ್ವೋಚ್ಚ ನ್ಯಾಯಾಲಯದ ಆದೇಶವಿಲ್ಲದಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಸರಿಯಲ್ಲ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ನೀರು ಹರಿಯಬಿಟ್ಟು ರೈತರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ವಾಸ್ತವ ಸ್ಥಿತಿಯನ್ನು ಅರಿತು ಸರ್ಕಾರ ತಕ್ಷಣ ನೀರು ಸ್ಥಗಿತಗೊಳಿಸದಿದ್ದರೆ ದೊಡ್ಡ ಹೋರಾಟ ರೂಪಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.


ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಹೊನ್ನಗಿರೀಗೌಡ, ಬಾಲಗಂಗಾಧರ್, ದೊರೆಸ್ವಾಮಿ, ಹಿರೇಮರಳಿ ಶ್ರೀನಿವಾಸ್, ಮಂಜು, ಅಭಿ ಇತರರಿದ್ದರು.