ಜಿಲ್ಲೆ

ಹೆದ್ದಾರಿಯಲ್ಲಿ ಮಲಗಿ ವಿನೂತನ ಪ್ರತಿಭಟನೆ

ಮದ್ದೂರು ಪಟ್ಟಣದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮದ್ದೂರು: ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಮತ್ತೆ ನೀರು ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ಖಂಡಿಸಿ ರೈತ ಸಂಘದ ಕಾರ್ಯಕರ್ತರು ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಲಗಿಕೊಂಡು ಬುಧವಾರ ಪ್ರತಿಭಟನೆ ನಡೆಸಿದರು.

ತಮಿಳುನಾಡಿಗೆ ನೀರು ಹರಿಸಿದರೂ ಜಿಲ್ಲೆಯ ಜನಪ್ರತಿನಿಧಿಗಳು, ಸಿನಿಮಾ ನಟರು, ಕಲಾವಿದರು, ಬೆಂಗಳೂರಿನ ನಿವಾಸಿಗಳು ಬೀದಿಗಿಳಿದು ಹೋರಾಟ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಮುಖಂಡ ಕೀಳಘಟ್ಟ ನಂಜುಂಡಯ್ಯ ಮಾತನಾಡಿ, ಸರ್ಕಾರ ನೀರು ಹರಿಸಲು ಮುಂದಾದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು. ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಮುಖಂಡರಾದ ಪ್ರಕಾಶ್, ಪ್ರಭುಲಿಂಗ, ಶಿವಲಿಂಗಯ್ಯ, ವೆಂಕಟೇಶ್, ಉಮೇಶ್, ರಮೇಶ್ ಇದ್ದರು.

ಇಂದು ಕೊಪ್ಪ ಬಂದ್: ರೈತ ಸಂಘ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಗುರುವಾರ ಕೊಪ್ಪ ಬಂದ್‌ಗೆ ಕರೆ ನೀಡಲಾಗಿದೆ. ವರ್ತಕರು, ರೈತರು ಹಾಗೂ ಗ್ರಾಮಸ್ಥರು ಸಹಕರಿಸಬೇಕೆಂದು ರೈತ ಸಂಘದ ಮುಖಂಡ ಕೀಳಘಟ್ಟ ನಂಜುಂಡಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.