ಜಿಲ್ಲೆ

ಹೊಸ ವರ್ಷಾಚರಣೆಗೆ ಕೋವಿಡ್ ನಿಯಮಾವಳಿ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ಹೊಸ ವರ್ಷಾಚರಣೆಗೆ ಕೋವಿಡ್ ನಿಯಮಾವಳಿಗಳನ್ನು ರೂಪಿಸಲಾಗುವುದು. ಇದಕ್ಕಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ, ಕಂದಾಯ ಸಚಿವ ಆರ್. ಅಶೋಕ ನೇತೃತ್ವದಲ್ಲಿ ಶೀಘ್ರ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಭೆಯಲ್ಲಿ ಸೂಚಿಸಿದಂತೆ ಅಗತ್ಯ ಕ್ರಮವನ್ನು ರಾಜ್ಯದಲ್ಲಿ ಕೈಗೊಳ್ಳಲಾಗುತ್ತಿದೆ. ಆಕ್ಸಿಜನ್ ಪ್ಲ್ಯಾಂಟ್​ಗಳನ್ನು ಸನ್ನದ್ಧಗೊಳಿಸಲು, ಬೂಸ್ಟರ್ ಡೋಸ್ ಕೊಡಲು, ತಪಾಸಣೆ ಹೆಚ್ಚಿಸಲು ಸೂಚಿಸಿದ್ದೇನೆ. ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ನಡೆಸಲಾಗುವುದು. ಜನರು ಆತಂಕಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ವಹಿಸಬೇಕು ಎಂದರು.

2-3 ದಿನ ಚರ್ಚೆ:

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ರ್ಚಚಿಸಲು ಸಭಾಧ್ಯಕ್ಷರ ಜತೆಗೆ ಮಾತನಾಡಿದ್ದೇನೆ. ಕನಿಷ್ಠ 2-3 ದಿನ ಚರ್ಚೆ ಆಗಬೇಕಿದೆ. ಇದಕ್ಕೆ ತಕ್ಕಂತೆ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದರು.

ಅವಧಿಪೂರ್ವ ಚುನಾವಣೆಗೆ ಹೋಗುವುದಿಲ್ಲ. ಕಾಂಗ್ರೆಸ್ ನಾಯಕರಿಗೆ ಅಭದ್ರತೆ ಕಾಡುತ್ತಿದೆ. ಹಾಗಾಗಿ ಕಾರ್ಯಕರ್ತರನ್ನು ಸನ್ನದ್ಧಗೊಳಿಸಲು ಹೀಗೆ ಹೇಳುತ್ತಿದ್ದಾರೆ ಎಂದು ಬೊಮ್ಮಾಯಿ ಟೀಕಿಸಿದರು.