ವಿಜಯವಾಣಿ ಸುದ್ದಿಜಾಲ ಹೊಸಕೋಟೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೊಸಕೋಟೆ ತಾಲೂಕಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಅತಿಹೆಚ್ಚು ಆಶ್ರಯ ಮನೆಗಳು ಮಂಜೂರಾಗಿದ್ದು, ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಶರತ್‌ಬಚ್ಚೇಗೌಡ ಮಾಹಿತಿ ನೀಡಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆಶ್ರಯ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲ 32 ಎಕರೆ 45 ಗುಂಟೆ ಜಾಗದಲ್ಲಿ ಬಡಾವಣೆ ಅಭಿವೃದ್ಧಿಗೆ 27.45 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, 915 ಫಲಾನುಭವಿಗಳಿಗೆ ಜನವರಿ ತಿಂಗಳಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಹಸ್ತಾಂತರಿಸಲಾಗುವುದು. ಈ ಸಂಬಂಧ ಗ್ರಾಮ ಪಂಚಾಯಿತಿಗಳಲ್ಲಿ ಸಭೆ ನೆಡೆಸಿ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಒಟ್ಟು 142 ಎಕರೆ 29 ಗುಂಟೆ ಜಾಗ ಗುರುತಿಸಿ 3,519 ಅರ್ಹರಿಗ ನಿವೇಶನ ನೀಡಲು ತೀರ್ಮಾನಿಸಿದ್ದು, ಬಡಾವಣೆ ಅಭಿವೃದ್ಧಿಗೆ 1.5 ಕೋಟಿ ರೂ. ಅನುದಾನ ಬಿಡುಗಡೆಗೆ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ. ನೂತನ ಬಡಾವಣೆ ನಿರ್ಮಾಣಕ್ಕೆ 105 ಎಕರೆ ಜಾಗ ಗುರುತಿಸಲಾಗಿದ್ದು, 59.23 ಎಕರೆ ಭೂಮಿಯನ್ನು ವಿವಿಧ ಕಾರಣಗಳಿಂದ ಕೈಬಿಡಲಾಗಿದೆ ಎಂದು ಶರತ್‌ಬಚ್ಚೇಗೌಡ ಮಾಹಿತಿ ನೀಡಿದರು. ತಹಸೀಲ್ದಾರ್ ಸೋಮಶೇಖರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ಸಿ.ಎನ್.ನಾರಾಯಣಸ್ವಾಮಿ ಸೇರಿದಂತೆ 28 ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ರಾಜಸ್ವ ನಿರೀಕ್ಷಕರು ಸಭೆಯಲ್ಲಿ ಭಾಗವಹಿಸಿದ್ದರು.
ಜನರಿಂದ ಬಿಜೆಪಿಯ ತಿರಸ್ಕಾರ: ರಾಜ್ಯದ 3 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಮತದಾರರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಕೈ ಹಿಡಿದಿದ್ದಾರೆ. ಆ ಮೂಲಕ ಬಿಜೆಪಿಯ ಆಧಾರರಹಿತ ಆರೋಪಗಳನ್ನು ಜನ ತಿರಸ್ಕರಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗಿದೆ ಎಂಬ ಸಂದೇಶವನ್ನು ಉಪಚುನಾವಣೆಯಲ್ಲಿ ಸಾರಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಸಂಸತ ವ್ಯಕ್ತಪಡಿಸಿದರು.