ದಿಗಾಹಂಡಿ: ಎರಡು ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಹತ್ತು ಜನರು ಮೃತಪಟ್ಟು, 8ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯ ದಿಗಾಹಂಡಿ ಪ್ರದೇಶದಲ್ಲಿ ನಡೆದಿದೆ.
ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಬಿತ್ತು ದಲಿತ ನಾಯಕರ ಕಣ್ಣು! ವರಿಷ್ಟರಿಗೆ ಮತ್ತೊಂದು ಸವಾಲು?
ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಖಂಡದೇಲಿ ಗ್ರಾಮದ ಕುಟುಂಬವೊಂದು ತಮ್ಮ ಮಗಳ ಮದುವೆಯನ್ನು ಬೆರ್ಹಾಂಪುರದಲ್ಲಿ ಮುಗಿಸಿಕೊಂಡು ಖಾಸಗಿ ಮಿನಿ ಬಸ್ನಲ್ಲಿ ವಾಪಾಸ್ಸಾಗುತ್ತಿದ್ದರು. ಈ ವೇಳೆ ಎದರುಗಡೆಯಿಂದ ಬಂದ ಒಡಿಶಾದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಮಿನಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಹಲವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಎಂಕೆಸಿಜಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸತ್ತವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದ್ದಾರೆ ಎಂದು ಪೊಲೀಸರು ಶಂಕಿಸಿದ್ದು, ಘಟನೆಯ ಕುರಿತು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಸಿನಿಮೀಯವಾಗಿ ಮಹಡಿಯಿಂದ ಹಾರಿದ ಆರೋಪಿ! ಮುಂದೇನಾಯ್ತು?
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜತೆಗೆ, ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.(ಏಜೆನ್ಸೀಸ್)