ನ್ಯೂಸ್

ಹಬ್ಬದ ಮೆರವಣಿಗೆಯತ್ತ ನುಗ್ಗಿದ ಟ್ರಕ್​: ಮಕ್ಕಳು ಸೇರಿದಂತೆ 12 ಮಂದಿ ದುರ್ಮರಣ, ಪ್ರಧಾನಿ ಮೋದಿ ಸಂತಾಪ

ಪಟನಾ: ವೇಗವಾಗಿ ಬಂದ ಟ್ರಕ್​ ಒಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹಬ್ಬದ ಮೆರವಣಿಗಾಗಿ ಸೇರಿದ್ದ ಜನರ ಗುಂಪಿನ ಕಡೆ ನುಗ್ಗಿದ ಪರಿಣಾಮ ಮಹಿಳೆ ಮತ್ತು ಮಕ್ಕಳ ಸೇರಿದಂತೆ 12 ಮಂದಿ ದುರಂತ ಸಾವಿಗೀಡಾಗಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ಮೆಹ್ನಾರ್​ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಹಬ್ಬದ ಹಿನ್ನೆಲೆಯಲ್ಲಿ ರಸ್ತೆ ಪಕ್ಕದಲ್ಲಿದ್ದ ಅರಳಿಮರದ ಮುಂದೆ ಸೇರಿ ಮೆರವಣಿಗೆ ನಡೆಸುವಾಗ ಟ್ರಕ್​ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ 12 ಮಂದಿ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿರುವ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಬಗ್ಗೆ ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಸಾವಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ ಮತ್ತು ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಸಂತಾಪ ವ್ಯಕ್ತಪಡಿಸಿದ್ದು, ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ಹೇಳಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಸೂಚಿಸಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. (ಏಜೆನ್ಸೀಸ್​)