ನ್ಯೂಸ್

ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳ ಅಭ್ಯುದಯಕ್ಕೆ 223 ಕೋಟಿ ರೂ. ಪ್ರಸ್ತಾವವೆ: ಸಚಿವ ಡಾ. ಎಂ.ಸಿ. ಸುಧಾಕರ್

ಬೆಂಗಳೂರು: ರಾಜ್ಯದ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಲ್ಪಾಪ್‌ಟಾಪ್, ವಿದ್ಯಾರ್ಥಿವೇತನ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರೋತ್ಸಾಹ ಧನ ಸೇರಿ ವಿವಿಧ ಕಾರ್ಯಕ್ರಮಗಳಿಗೆ 223 ಕೋಟಿ ರೂ,ಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯಲ್ಲಿ ಬುಧವಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮತ್ತು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗದ ಟೆಲಿವಿಷನ್ ಸ್ಟುಡಿಯೋ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ವಿವಿಧ ಕಾರ್ಯಕ್ರಮಗಳನ್ನು ರೂಪಿಸುವ ಸಂಬಂಧ ಬಜೆಟ್ ಪೂರ್ವ ಸಿದ್ಧತಾ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಸಂಬಂಧ ಶಾಸಕ ನರೇಂದ್ರ ಸ್ವಾಮಿ ಕೂಡ ನನಗೆ ಧ್ವನಿಗೂಡಿಸಿದ್ದಾರೆ. ಸರ್ಕಾರ ಅನುಮತಿ ನೀಡಿದ ನಂತರ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದರು.

ವಿವಿ ಗಳಿಗೆ ಕಾಯಂ ಸಿಬ್ಬಂದಿ ಯಾವಾಗ?

ಎಲ್ಲ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಹಾಗೆಯೇ ಉನ್ನತ ಶಿಕ್ಷಣದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯ ಸೇರಿ 15 ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿ ಹೊರ ಗುತ್ತಿಗೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂದಿನ 5 ವರ್ಷದಲ್ಲಿ 2.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಮ್ಮ ಪಕ್ಷ್ವಉ ಭರವಸೆ ನೀಡಿದೆ. ಅದರಂತೆ ಹುದ್ದೆಗಳನ್ನು ತುಂಬುವ ಕೆಲಸ ಮಾಡಲಾಗುತ್ತದೆ. ಸಿದ್ದರಾಮಯ್ಯನವರ ಹಿಂದಿನ ಸರ್ಕಾರದಲ್ಲಿ ಬಹುತೇಕ ಭರವಸೆಗಳನ್ನು ಈಡೇರಿಸಲಾಗಿತ್ತು. ಅದರಂತೆ ಈ ಬಾರಿಯೂ ಭರವಸೆಗಳು ಈಡೇರಲಿದೆ. ಆ ಸಂದರ್ಭದಲ್ಲಿ ಇಲಾಖೆಯ ಹುದ್ದೆಗಳನ್ನು ಕೂಡ ಭರ್ತಿ ಮಾಡಲಾಗುತ್ತದೆ ಎಂದು ಹೇಳಿದರು.

ವಿಶ್ವವಿದ್ಯಾಲಯಗಳ ಸಿಬ್ಬಂದಿ ಸಮಸ್ಯೆಯನ್ನು ಇಲಾಖೆ ಹೆಚ್ಚುವರಿ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ. ಕೆಲವು ವಿವಿಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಪ್ರತಿಕ್ರಿಯಿಸಿದರು.

ಕೆಲವು ವಿಸಿ ಗಳ ಅಭಿಪ್ರಾಯ ಸಲ್ಲಿಕೆ:

ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿರುವ ಸಂಬಂಧ ಸಾಧಕ/ಬಾಧಕಗಳ ಬಗ್ಗೆ ಕೆಲವು ಕುಲಪತಿಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದೆಲ್ಲವನ್ನೂ ಪರಿಗಣಿಸಿ ಬಜೆಟ್‌ನಲ್ಲಿ ೋಷಿಸಿರುವಂತೆ ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೊಳಿಸುವ ಕುರಿತು ಸಿದ್ಧತೆಗಳು ನಡೆಯುತ್ತಿವೆ ಎಂದು ಪ್ರತಿಕ್ರಿಯಿಸಿದರು.