ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ಗುತ್ತಿಗೆದಾರರು ಮಾಡಿದ್ದ 40 ಪರ್ಸೆಂಟ್ ಲಂಚ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ವಿಚಾರಣಾ ಆಯೋಗ ರಚಿಸಿದೆ.
ಈ ಹಿಂದೆ ಇದೇ ವಿಷಯವಾಗಿ ತನಿಖೆ ನಡೆಸಲು ತನಿಖಾ ಸಮಿತಿ ರಚಿಸಿತ್ತು. ಈಗ ಆ ಸಮಿತಿ ರದ್ದುಪಡಿಸಿ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ತನಿಖೆಯನ್ನು ನಡೆಸಲು ವಿಚಾರಣಾ ಆಯೋಗ ರಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನಾಗ ಮೋಹನದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ನೇಮಿಸಿದೆ. ತನಿಖೆಯನ್ನು 3 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸರ್ಕಾರ ಅಪೇಕ್ಷಿಸಿದೆ.
ಕರ್ನಾಟಕ ಸ್ಟೇಟ್ ಕಂಟ್ರ್ಯಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆಂಪಣ್ಣ ಅವರು ರಾಜ್ಯದಲ್ಲಿ ಪ್ರಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮೀಷನ್ ಕೇಳುತ್ತಿರುವ ಕುರಿತು ಪ್ರಧಾನ ಮಂತ್ರಿ ಹಾಗೂ ನಿಕಟ ಪೂರ್ವ ಮುಖ್ಯಮಂತ್ರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದರು. ಇದು ರಾಷ್ಟ್ರಾದ್ಯಂತ ದೊಡ್ಡ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು.
ಇದುವರೆಗೆ ಈ ಗಂಭೀರ ಆರೋಪಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ತನಿಖೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆಗಳಲ್ಲಿ ನಡೆಸುವ ಟೆಂಡರ್ ಪ್ರಕ್ರಿಯೆ, ಪ್ಯಾಕೇಜ್ ಪದ್ಧತಿ, ಪುನರ್ ಅಂದಾಜು, ಬಾಕಿ ಮೊತ್ತ ಬಿಡುಗಡೆ ಇತ್ಯಾದಿ ವಿಷಯಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ದೂರುದಾರ ಕೆಂಪಣ್ಣ ಅವರ ಆರೋಪದ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಲು ತನಿಖೆಯ ಅಗತ್ಯವಿರುವುದನ್ನು ಮನಗಂಡು ಸರ್ಕಾರ ವಿಚಾರಣಾ ಆಯೋಗ ರಚಿಸಿದೆ.