ನ್ಯೂಸ್

Mahakumbh ಮೇಳದಿಂದ ವಾಪಸ್​ ಆಗುತ್ತಿದ್ದಾಗ ಭೀಕರ ಅಪಘಾತ; ಐದು ಮಂದಿ ಸಾವು, ನಾಲ್ವರು ಗಂಭೀರ

ಪಟ್ನಾ: ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ (Mahakumbh Mela) ಭಾಗಿಯಾಗಿ ವಾಪಸ್​ ತೆರಳುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಐದು ಮಂದಿ ಮೃತಪಟ್ಟಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಘಟನೆ ಕುರಿತು ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಮೃತರೆಲ್ಲರೂ ನೇಪಾಳ ಮೂಲದವರು ಎಂದು ತಿಳಿದು ಬಂದಿದ್ದು, ಮಹಾಕುಂಭಮೇಳ (Mahakumbh Mela) ಮುಗಿಸಿಕೊಂಡು ತಮ್ಮ ಊರಿಗೆ ವಾಪಸ್​ ಹೋಗುತ್ತಿದ್ಧಾಗ ಈ ದುರ್ಘಟನೆ ಸಂಭವಿಸಿದೆ.

ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಅಪಘಾತ ಸಂಭವಿಸಿದ್ದು, ಮೂವರು ಮಹಿಳೆಯರು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಟ್ನಾಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.