ಬೆಂಗಳೂರು: ರಾಜ್ಯಾದ್ಯಂತ ಶಿಕ್ಷಣ-ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ಉಗ್ರಾಣ, ಶೈತ್ಯಾಗಾರಗಳ ನಿರ್ಮಾಣ, ವಾಹನ ಬಿಡಿಭಾಗ, ಪಿವಿಸಿ ಪೈಪ್ ತಯಾರಿಕೆ ಸೇರಿದಂತೆ ಒಟ್ಟು 6,407.82 ಕೋಟಿ ರೂ. ಬಂಡವಾಳ ಮೊತ್ತದ ಹೂಡಿಕೆಯ ಪ್ರಸ್ತಾವಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಅನುಮೋದನೆ ನೀಡಿದೆ.
ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ 143 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 6407.82 ಕೋಟಿ ರೂ. ಬಂಡವಾಳ ಹೂಡಿಕೆಯ 128 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 33,771 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
ಬೆಂಗಳೂರು ಗ್ರಾಮಾಂತರ, ಬೆಳಗಾವಿ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯ ವಿವಿಧ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಈ ಯೋಜನೆಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 485 ಕೋಟಿ ರೂ.ಬಂಡವಾಳದ ಯಾಂತ್ರಿಕೃತ ಎರಕಹೊಯ್ಯುವ ಘಟಕ ಸ್ಥಾಪನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ 484.33 ಕೋಟಿ ರೂ. ಮೊತ್ತದ ವಿಜ್ಞಾನ , ತಂತ್ರಜ್ಞಾನ ಸಂಶೋಧನೆ ಹಾಗೂ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆ, ಮೈಸೂರು ಜಿಲ್ಲೆಯಲ್ಲಿ 415 ಕೋಟಿ ರೂ. ಮೊತ್ತದ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಶಿಕ್ಷಣ ವಿಶ್ವವಿದ್ಯಾಲಯ ಸ್ಥಾಪನೆ ಮುಂತಾದವು ಸೇರಿವೆ.
50 ಕೋಟಿ ರೂ.ಗೂ ಹೆಚ್ಚಿನ ಬಂಡವಾಳ ಹೂಡಿಕೆಯ 22 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ 4230.64 ಕೋಟಿ ರೂ. ಹೂಡಿಕೆಯೊಂದಿಗೆ 24,846 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. 15 ಕೋಟಿ ರೂ.ಗಳಿಂದ 50 ಕೋಟಿ ರೂ.ಒಳಗಿನ ಬಂಡವಾಳ ಹೂಡಿಕೆಯ 104 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಂದ 2056.68 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ 8,425 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ.
ಹೆಚ್ಚುವರಿ ಬಂಡವಾಳ ಹೂಡಿಕೆಯ 2 ಯೋಜನೆಗಳಿಗೆ ಸಭೆಯು ಅನುಮೋದಿಸಿದ್ದು ಇದರಿಂದ 120.50 ಕೋಟಿ ರೂ. ಹೂಡಿಕೆ ಆಗಲಿದ್ದು, 500 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ಡಾ. ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಡಾ. ಎಸ್.ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಸಿಇಒ ಡಾ.ಎನ್. ಮಹೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.