ಮೈಸೂರು: ಕೃಷ್ಣರಾಜನಗರ ಮತ್ತು ಸಾಲಿಗ್ರಾಮ ತಾಲೂಕಿನ ನಾಗರಿಕ ವೇದಿಕೆ ವತಿಯಿಂದ ಸಂಸದ ಯುದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಪೌರ ಸನ್ಮಾನ ಹಾಗೂ ವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ ರಾಜ್ಯಕ್ಕೆ 3ನೇ ರ‌್ಯಾಂಕ್ ಪಡೆದಿರುವ ಮಾಜಿ ಸಚಿವ ಸಾ.ರಾ.ಮಹೇಶ್ ಪುತ್ರ ಡಾ.ಸಾ.ರಾ.ಧನುಷ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಜು.7 ರಂದು ಸಂಜೆ 4.30ಕ್ಕೆ ಕೆ.ಆರ್.ನಗರದ ಪಿಎಲ್‌ಡಿ ಬ್ಯಾಂಕ್ ರೈತ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎ.ಎಸ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್, ಮಾಜಿ ಸಚಿವ ಸಾ.ರಾ.ಮಹೇಶ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.