ನ್ಯೂಸ್

ಗಣೇಶ ಮೆರವಣಿಗೆ ವೇಳೆ ಕ್ಯಾಂಟರ್‌ ಹರಿದು 8 ಜನ ಸಾವು, 20 ಮಂದಿಗೆ ಗಾಯ| Hassan Tragedy

ಹಾಸನ ; ಇಂದು (ಸೆ.12) ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಏಕಾಏಕಿ ಟ್ರಕ್ ಹರಿದ ಪರಿಣಾಮ, ಎಂಟು ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಹೊಳೆನರಸೀಪುರ ಕಡೆ ಹೊರಟಿದ್ದ ಕ್ಯಾಂಟರ್‌ ಡಿಕ್ಕಿಯಾಗಿ ಈ ಗಂಭೀರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಅಡ್ಡ ಬಂದ ಬೈಕ್‌ ಸವಾರನನ್ನು ತಪ್ಪಿಸಲು ಹೋಗಿ ಕ್ಯಾಂಟರ್‌ ಚಾಲಕ ಮೆರವಣಿಗೆಯ ಮೇಲೆ ವಾಹನ ಹತ್ತಿಸಿದ್ದಾನೆ. ಇನ್ನೂ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ, ಸೂರಜ್‌ ರೇವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ವೀಟ್​ ಮೂಲಕ ಎಚ್​ಡಿಕೆ ಸಂತಾಪ

ಇನ್ನೂ ಈ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್​​ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ. ಇದು ಅತೀ ದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ. ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ

ಇನ್ನೂ ಈ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಎಕ್ಸ್​ನಲ್ಲಿ ಟ್ವೀಟ್​ ಮಾಡಿದ್ದಾರೆ. ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ಪೋಸ್ಟ್​ ಮಾಡಿದ್ದಾರೆ.

(ಏಜೆನ್ಸೀಸ್)