ಫಿರೋಜಾಬಾದ್: ಆಘಾತಕಾರಿ ಘಟನೆಯೊಂದರಲ್ಲಿ ಆಟವಾಡುತ್ತಿದ್ದ ಬಾಲಕ ಹಠಾತ್ತನೆ ಕುಸಿದುಬಿದ್ದು ನಿಗೂಢವಾಗಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ನಲ್ಲಿ ನಡೆದಿದೆ.
ಬಾಲಕ ಕುಸಿದುಬಿದ್ದು ಮೃತಪಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೃತ ಬಾಲಕನನ್ನು ಫಿರೋಜಾಬಾದ್ನ ಹುಹಿಮಯುನ್‌ಪುರದ ಚಂದ್ರಕಾಂತ್ (08) ಎಂದು ಗುರುತಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಶನಿವಾರ ಮಧ್ಯಾಹ್ನ ಊಟದ ಸಮಯದಲ್ಲಿ ಈ ಘಟನೆ ನಡೆದಿದ್ದು, ವೈರಲ್ ಆಗಿರುವ ವಿಡಿಯೋದಲ್ಲಿ ಬಾಲಕ ಓಡುತ್ತಿರುವುದನ್ನು ನೋಡಬಹುದಾಗಿದೆ. ಸ್ನೇಹಿತರೊಂದಿಗೆ ಬಾಲಕ ಆಟವಾಡುತ್ತಿದ್ದ ವೇಳೆ ಆತ ಅಚಾನಕ್ ಆಗಿ ಕುಸಿದು ಬಿದಿದ್ದು, ಕೂಡಲೇ ಇದನ್ನು ಗಮನಿಸಿದ ಶಾಲಾ ಸಿಬ್ಬಂದಿ ಹಾಗೂ ಆತನ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದು ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಹಾರ್ಟ್ ಅಟ್ಯಾಕ್ ಆಗಿರುವ ಬಗ್ಗೆ ವೈದ್ಯರು ಸಂಶಯ ವ್ಯಕ್ತಪಡಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.