ಬೆಂಗಳೂರು: ನಗರದ ರೇಸ್‌ಕೋರ್ಸ್ ರಸ್ತೆಯ ಪ್ರತಿಷ್ಟಿತ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಹೋಟೆಲ್‌ನಲ್ಲಿ ಬಾಂಬ್ ಇರಿಸಿದ್ದು, ಕೆಲವೇ ನಿಮಿಷಗಳಲ್ಲಿ ಸ್ಫೋಟವಾಗಲಿದೆ ಎಂದು ದುಷ್ಕರ್ಮಿಗಳು ಹೋಟೆಲ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದಾರೆ. ಶನಿವಾರ ಬೆಳಗ್ಗೆ ಈ ಇ-ಮೇಲ್ ಗಮನಿಸಿರುವ ಹೋಟೆಲ್ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳವನ್ನು ಸ್ಥಳಕ್ಕೆ ಕರೆಸಿಕೊಂಡು ಹೋಟೆಲ್ ಅನ್ನು ಸಂಪೂರ್ಣವಾಗಿ ತಪಾಸಣೆ ಮಾಡಿದ್ದಾರೆ.
ತಪಾಸಣೆ ವೇಳೆ ಹೋಟೆಲ್ ಒಳಗೆ ಹಾಗೂ ಹೊರ ಆವರಣದಲ್ಲಿ ಯಾವುದೇ ಸ್ಫೋಟಕ ವಸ್ತು, ಬಾಂಬ್ ಸೇರಿದಂತೆ ಯಾವುದೇ ಸ್ಫೋಟಕ ಸಾಮಾಗ್ರಿಗಳು ಪತ್ತೆಯಾಗಿಲ್ಲ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ಖಚಿತವಾಗಿದೆ. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಕಿಡಿಗೇಡಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಖಾಸಗಿ ಶಾಲೆಗಳು, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದ ಬೆನ್ನಲ್ಲೆ ಇದೀಗ ಪ್ರತಿಷ್ಠಿತ ಹೋಟೆಲ್‌ಗೆ ಬಾಂಬ್ ಸಂದೇಶ ಬಂದಿರುವುದು ಆತಂಕಕ್ಕಿಡುಮಾಡಿದೆ.