ಪಿರಿಯಾಪಟ್ಟಣ: ಜಾತಿ ವ್ಯವಸ್ಥೆ ಮತ್ತು ಅಸಮಾನತೆಯ ವಿರುದ್ಧ ಧ್ವನಿ ಎತ್ತುವ ಮೂಲಕ ಸಮಸಮಾಜ ನಿರ್ಮಾಣಕ್ಕೆ ಕನಕದಾಸರು ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ ಎನ್.ನಂಜುಂಡಸ್ವಾಮಿ ಅಭಿಪ್ರಾಯಪಟ್ಟರು.
ಪಟ್ಟಣದ ಅರಸು ಭವನದಲ್ಲಿ ಗುರುವಾರ ಆಯೋಜಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, 15 ಮತ್ತು 16 ನೇ ಶತಮಾನದಲ್ಲಿ ಸಮಾಜದಲ್ಲಿದ್ದ ಅಸಮಾನತೆ, ಜಾತಿ, ಮತ, ಕುಲಗಳ ಭೇದ ಭಾವವನ್ನು ಹೋಗಲಾಡಿಸಲು ಸಾಮಾಜಿಕ ಪಿಡುಗುಗಳ ಬಗ್ಗೆ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ಕೀರ್ತನೆಗಳನ್ನು ರಚಿಸಿ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದು ದಾಸಶ್ರೇಷ್ಠರಲ್ಲಿ ಅಗ್ರಗಣ್ಯರಾಗಿದ್ದಾರೆ ಎಂದರು.
ಕನಕದಾಸರು ಮನುಕುಲದ ಉದ್ದಾರಕ್ಕಾಗಿ ನೀಡಿದ ಕೊಡುಗೆಗಳು ಅಪಾರವಾಗಿದ್ದು ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ? ಎಂದು ಹೇಳುವ ಮೂಲಕ ಜನರನ್ನು ಸರಿ ದಾರಿಗೆ ತರುವ ಪ್ರಯತ್ನ ಮಾಡಿದ್ದಾರೆ ಎಂದರು.
ಕೆಪಿಸಿಸಿ ಸದಸ್ಯ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಮಾತನಾಡಿ, ಕನಕದಾಸರ ಕೀರ್ತನೆಗಳಲ್ಲಿ ಸರ್ವರನ್ನು ಸಮಾನವಾಗಿ ಕಾಣಬೇಕೆಂಬ ಉದ್ದೇಶ ಇದೆ. ಕನಕದಾಸರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಾರ್ಥಕತೆಯನ್ನು ಕಾಣಬಹುದಾಗಿದೆ ಎಂದರು.
ತಹಸೀಲ್ದಾರ್ ಕುಂಜಿ ಅಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಚ್.ಡಿ.ಗಣೇಶ್ ಮಾತನಾಡಿದರು. ಸಮಾರಂಭದಲ್ಲಿ ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಪಿ.ಪಿ.ಪುಟ್ಟಯ್ಯ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎ.ಕೆ.ಗೌಡ, ಮುಖಂಡರಾದ ವಿಜಯಕುಮಾರ್, ಟಿ.ಈರಯ್ಯ, ಸರಸ್ವತಿ, ರಾಜೇಗೌಡ, ಸುನಿಲ್‌ಕುಮಾರ್, ಆರ್.ಎಸ್.ಮಹದೇವ್, ಲೋಕಪಾಲಯ್ಯ, ಬೂತನಹಳ್ಳಿ ಶಿವಣ್ಣ, ರವಿ, ಲೋಹಿತ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.