ನ್ಯೂಸ್

PSI ಪರೀಕ್ಷೆ ಅಕ್ರಮದಲ್ಲಿ ರಾಜಕೀಯ ಲಾಭ ಪಡೆಯಲು ಪ್ರಿಯಾಂಕ್​ ಖರ್ಗೆಯಿಂದ ಇನ್ನಿಲ್ಲದ ಕಸರತ್ತು: ಡಾ.ಸುಧಾಕರ್

ಶಿವಮೊಗ್ಗ: ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಸತ್ಯ ಅರ್ಥ ಮಾಡಿಕೊಂಡು ಮಾತನಾಡಬೇಕು. ಪಿಎಸ್‌ಐ ಪರೀಕ್ಷಾ ಅಕ್ರಮದಲ್ಲಿ ರಾಜಕಾರಣದ ಲಾಭ ಮಾಡಿಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಮೂರನೇ ಸಿಎಂ ಅಧಿಕಾರಕ್ಕೆ ಬರುತ್ತಾರೆ ಎಂಬ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಪರೀಕ್ಷಾ ಅಕ್ರಮದ ಬಗ್ಗೆ ವ್ಯಾಪಕ ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಸರ್ಕಾರ ಇದಕ್ಕೆ ತಾರ್ಕಿಕ ಅಂತ್ಯ ನೀಡಲಿದೆ. ಈ ಹಂತದಲ್ಲಿ ಸರ್ಕಾರದಲ್ಲಿ ಇರುವವರು ಒಬ್ಬೊಬ್ಬರು ಒಂದೊಂದು ಮಾತನಾಡುವುದು ಸರಿಯಲ್ಲ ಎಂದರು.

ಬಿಜೆಪಿಯಿಂದ ಹಲವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸುಧಾಕರ್, ನಾವೂ ಅದನ್ನು ಹೇಳುವುದಿಲ್ಲ. ಮಾಡಿ ತೋರಿಸುತ್ತೇವೆ ಎಂದು ಹೇಳಿದರು.