ನ್ಯೂಸ್

ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ

ನಂಜನಗೂಡು: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಲಭ್ಯವಾಗುವಂತೆ ನೋಡಿಕೊಳ್ಳುವ ಜತೆಗೆ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ ಹೇಳಿದರು.

ತಾಲೂಕಿನ ಕುಪ್ಪರವಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಮಂಗಳವಾರ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಬಳಿಕ ಶಾಲಾ, ಕಾಲೇಜುಗಳಿಗೆ ತೆರಳಿ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ಜತೆಗೆ ಸ್ಥಳೀಯ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಆದ್ಯತೆ ಮೇರೆಗೆ ಪರಿಹರಿಸಲು ಪ್ರಯತ್ನಿಸುತ್ತಿದ್ದೇನೆ. ಸರ್ಕಾರದಿಂದ ಸದ್ಯದಲ್ಲಿಯೇ ಅನುದಾನ ಬಿಡುಗಡೆಯಾಗಲಿದ್ದು, ಲಭ್ಯವಾಗುವ ಮೊದಲ ಅನುದಾನದಲ್ಲಿಯೇ ಕುಪ್ಪರವಳ್ಳಿ ಶಾಲೆಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಬಿಸಿ ಊಟ ಸೇವನೆ ಮಾಡಿದ ಕೆ.ವಿವೇಕಾನಂದ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿ ಊಟದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರ ಥ್ರೋಬಾಲ್ ತಂಡಕ್ಕೆ ಸಮವಸ್ತ್ರ ಹಾಗೂ ಅಗತ್ಯ ಕ್ರೀಡಾಪರಿಕರಗಳನ್ನು ಖರೀದಿಸಲು ದೇಣಿಗೆ ನೀಡಿದರು.

ಶಾಲೆಯ ಮುಖ್ಯಶಿಕ್ಷಕಿ ಎಂ.ಎಸ್. ಭಾರತಿ, ಶಿಕ್ಷಕ ದೀಪು, ವಿಜಯಶ್ರೀ, ಜಮುನಾ, ಶಿಲ್ಪಾ, ರೂಪ, ಜಯಣ್ಣ, ಗೋವಿಂದ, ಸಂತೋಷ ಗುಡ್ಡಿಯಂಗಡಿ ಇತರರು ಇದ್ದರು.