ನ್ಯೂಸ್

ಮೆಟ್ರೋ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಿಬ್ಬಂದಿ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಮೆಟ್ರೋ ಭದ್ರತಾ ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ನೆಲಮಂಗಲದ ಲೋಕೇಶ್(೩೦) ಎಂಬಾತನನ್ನು ಹಿಡಿದು ಉಪ್ಪಾರಪೇಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಲೈಂಗಿಕ ಕಿರುಕುಳದ ಆರೋಪ ಕುರಿತು ಈವರೆಗೂ ಯಾರೂ ದೂರು ನೀಡಿಲ್ಲ. ಆದರೆ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ಬೆಳಗ್ಗೆ ೯.೪೦ರ ಸುಮಾರಿಗೆ ೨೨ ವರ್ಷದ ಯುವತಿಯೊಬ್ಬರು ರಾಜಾಜಿನಗರ ಮೆಟ್ರೋ ನಿಲ್ದಾಣದಿಂದ ಮೆಜೆಸ್ಟಿಕ್ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಆರೋಪಿ ಲೋಕೇಶ್, ಯುವತಿಯ ಮೈ-ಕೈ ಮುಟ್ಟಿ ಕಿರಕುಳ ನೀಡಿದ ಎಂಬ ಆರೋಪ ಕೇಳಿ ಬಂದಿದೆ. ಈ ವೇಳೆ ಆ ಯುವತಿ ಜೋರಾಗಿ ಚೀರಾದ ಪರಿಣಾಮ ಮೆಟ್ರೋ ರೈಲು ನಿಲ್ದಾಣದ ಭದ್ರತಾ ಸಿಬ್ಬಂದಿ ಆರೋಪಿ ಲೋಕೇಶ್‌ನನ್ನು ವಶಕ್ಕೆ ಪಡೆದು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೊಬೈಲ್ ಕಳ್ಳ:
ಆರೋಪಿ ಲೋಕೇಶ್‌ಗೆ ಅಪರಾಧ ಹಿನ್ನೆಲೆ ಇರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಕಳೆದ ವರ್ಷ ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರ ಮೊಬೈಲ್ ಕಳ್ಳತನ ಮಾಡುವಾಗ ಸಿಕ್ಕಿಬಿದ್ದಿದ್ದ. ಈ ವೇಳೆ ಆತನನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿ ೨೦ ಮೊಬೈಲ್ ಫೋನ್‌ಗಳು ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಿದ್ದರು. ಇದೀಗ ಮೆಟ್ರೋ ರೈಲು ನಿಲ್ದಾಣದ ಘಟನೆ ಸಂಬಂಧ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.