ಯಳಂದೂರು: ನ.1 ರಂದು 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ತಾಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಯಿತು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ನಯನಾ ಮಾತನಾಡಿ, ರಾಷ್ಟ್ರೀಯ ಹಬ್ಬ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸುವುದು ಕಡ್ಡಾಯವಾಗಿರುತ್ತದೆ. ಆದರೆ ಇತ್ತೀಚೆಗೆ ನಡೆದ ಕೆಲವು ರಾಷ್ಟೀಯ ಹಬ್ಬಗಳಲ್ಲಿ ಹಲವಾರು ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿರುವುದಿಲ್ಲ ಎಂದು ಸಂಘ-ಸಂಸ್ಥೆಗಳ ಪ್ರತಿನಿಧಿಗಳು ದೂರಿರುತ್ತಾರೆ. ಇದನ್ನು ನಾನು ಸಹಿಸುವುದಿಲ್ಲ. ಇನ್ನುಮುಂದೆ ನಡೆಯುವ ಎಲ್ಲ ರಾಷ್ಟ್ರೀಯ ಹಬ್ಬಗಳಿಗೂ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು. ಗೈರು ಹಾಜರಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಸಾಪ ಅಧ್ಯಕ್ಷ ಯರಿಯೂರು ನಾಗೇಂದ್ರ ಮಾತನಾಡಿ, ತಾಲೂಕಿನಲ್ಲಿ ಹಿಂದಿನಿಂದಲೂ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಕೋವಿಡ್ ನಂತರದ ದಿನಗಳಲ್ಲಿ ಮೆರವಣಿಗೆಯನ್ನು ನಿಲ್ಲಿಸಲಾಗಿತ್ತು. ಈ ಬಾರಿ ನಾಡಗೀತೆಗೆ 100 ವರ್ಷಗಳು ತುಂಬಿರುವ ವಿಶೇಷವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿಗಳು, ಸಿಬ್ಬಂದಿ, ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸೇರಿ ನಾಡಗೀತೆಯನ್ನು ಹಾಡುವ ಮೂಲಕ ನಾಡಗೀತೆಯ ಮಹತ್ವವನ್ನು ಸಾರಬೇಕಿದೆ. ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ನಾಡು-ನುಡಿಗೆ ಸಂಬಂಧಿಸಿದ ವೇಷಭೂಷಣಗಳನ್ನು ತೊಟ್ಟು ಭಾಗವಹಿಸುವ ಮೂಲಕ ಕನ್ನಡ ರಾಜ್ಯೋತ್ಸವದ ಮಹತ್ವ ಸಾರಬೇಕಿದೆ ಎಂದು ಮನವಿ ಮಾಡಿದರು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ವೈ.ಕೆ.ಮೋಳೆ ನಾಗರಾಜು ಮಾತನಾಡಿ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ಎಲ್ಲ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮತ್ತು ತಳಿರು-ತೋರಣಗಳಿಂದ ಸಿಂಗರಿಸಬೇಕು. ರಾಜ್ಯೋತ್ಸವ ದಿನದಂದು ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಕಡ್ಡಾಯವಾಗಿ ನಾಡಧ್ವಜಾರೋಹಣ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪ.ಪಂ. ಮುಖ್ಯಾಧಿಕಾರಿ ಮಹೇಶ್‌ಕುಮಾರ್, ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜೆ.ಶ್ರೀನಿವಾಸ್, ಸಹಾಯಕ ಕೃಷಿ ನಿರ್ದೇಶಕ ಅಮೃತೇಶ್ವರ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜಿ.ಎಸ್.ರಾಜು, ಸೆಸ್ಕ್ ಎಇಇ ಲಿಂಗರಾಜು ಸೇರಿದಂತೆ ಇತರರು ಹಾಜರಿದ್ದರು.