ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಹಂಚಿಕೆಯಾಗಿರುವ ಬದಲಿ ನಿವೇಶನದಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ, ಈ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಈಗಾ ಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಪಾರ್ವತಿಗೆ ಅವರಿಗೆ ಸೇರಿದ ಭೂಮಿಯನ್ನು ಮುಡಾ ಸ್ವಾಧೀನ ಪಡಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಬದಲಿ ನಿವೇಶನ ನೀಡಲಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ, ಜೆಡಿಎಸ್ ಪಕ್ಷದ ಮೇಲೆ ಅವಲಂಬಿತರಾಗಿ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.