ನ್ಯೂಸ್

2017-18ರ ಬ್ಯಾಚ್‌ಗೆ ಕೆಎಎಸ್ ಬರೆಯಲು ಮತ್ತೊಂದು ಅವಕಾಶ

ಎನ್.ಎಲ್. ಶಿವಮಾದು

ಬೆಂಗಳೂರು ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೆ ಸಾಲಿನಲ್ಲಿ ಕೆಎಎಸ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ.

ರಾಜ್ಯ ಸರ್ಕಾರವು 2023-24ನೇ ಸಾಲಿನ ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಸಲಾಗಿದೆ. ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆತಿದ್ದು, ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿರುವ ಹಿನ್ನೆಲೆಯಲ್ಲಿ 2017-18ರಲ್ಲಿ ಕೆಎಎಸ್ ಬರೆದಿದ್ದ ಎಲ್ಲರಿಗೂ ವಯಸ್ಸಿನ ನಿರ್ಬಂಧವಿಲ್ಲದೆ ಅನುಮತಿ ನೀಡಲಾಗಿದೆ.

ಇಂತಹ ಅಭ್ಯರ್ಥಿಗಳೂ ನೇಮಕಾತಿಗೆ ಅರ್ಜಿ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಈ ಆದೇಶಕ್ಕೆ ಸಚಿವ ಸಂಪುಟದ ಘಟನೋತ್ತರ ಮಂಜೂರಾತಿ ಪಡೆಯುವ ಷರತ್ತಿಗೆ ಒಳಪಟ್ಟಿರುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ.