ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಣದ ಮಾಡಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ ಹಿನ್ನೆಲೆಯಲ್ಲಿ ಸಿಐಡಿ ಕಚೇರಿ ಮುಂಭಾಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ನಿವಾಸದಿಂದ ರೇವಣ್ಣ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ನಗರದ ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿ ಕಾರ್ಲಟನ್ ಭವನಕ್ಕೆ ಕರೆದೊಯ್ದರು. ಇಲ್ಲಿರುವ ಸಿಐಡಿ ಕಚೇರಿಯಲ್ಲೇ ಎಸ್ಐಟಿ ಕಚೇರಿ ಇದೆ. ಭವನದ ಸುತ್ತಮುತ್ತ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಸಿಐಡಿ ಕಚೇರಿ ಮುಂಭಾಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶೇಷಾದ್ರಿಪುರಂ ಎಸಿಪಿ ಪ್ರಕಾಶ್, ಹೈಗ್ರೌಂಡ್ಸ್ ಇನ್ಸ್ಪೆಕ್ಟರ್ ಭರತ್ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದೆ.
ಆರೋಪಿಯನ್ನು ಕಚೇರಿಯಿಂದ ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಕರೆದೊಯ್ಯಬೇಕು. ಇದಾದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಯನ್ನು ಎಸ್ಐಟಿ ಅಧಿಕಾರಿಗಳು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.