ನ್ಯೂಸ್

ಹಿರಿಯ ನಟಿ ಲೀಲಾವತಿ ಮೃತ- ಆರಿತು ಕನ್ನಡದ 'ನಂದಾದೀಪ' - 600 ಚಿತ್ರಗಳಲ್ಲಿ ನಟನೆ

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ(86) ಕೊನೆಯುಸಿರೆಳೆದಿದ್ದಾರೆ.

ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿ ವೈದ್ಯರ ಸಲಹೆ ಮೇರೆಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಲೀಲಾವತಿ ಅವರ ಆರೋಗ್ಯ ತೀರಾ ಹದಗೆಟ್ಟಿತ್ತು.

ಲೀಲಾವತಿ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದರು. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದರು. ಅವರಿಗೆ ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000ನೇ ಸಾಲಿನಲ್ಲಿ ನೀಡಿ ಗೌರವಿಸಿತ್ತು. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ನೀಡಿತ್ತು. ನೀಡಲಾಯ್ತು.

ಲೀಲಾವತಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಹುಟ್ಟಿದ್ದು, ಮನೆ ಕೆಲಸ ಮಾಡಿಕೊಂಡು ಜೀವನ ಸಾಗಿಸಿದ್ದ ಅವರು ರಂಗಭೂಮಿ ಬಗ್ಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದರು. ಮೈಸೂರಿನಲ್ಲಿ ವೃತ್ತಿಜೀವನ ಆರಂಭಿಸಿದ್ದು, ರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಂಡು, ಬಳಿಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

ಕೃಷಿಯಲ್ಲಿ ಖುಷಿ : ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ. ತಾಯಿ-ಮಗ ಇಬ್ಬರೂ ನೆಲಮಂಗಲದ ಬಳಿ ಭೂಮಿ ಖರೀದಿಸಿ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಇದೀಗ ವಿನೋದ್​ ರಾಜ್ ​ ತಾಯಿ ಕಳೆದುಕೊಂಡು ಒಬ್ಬಂಟಿಯಾಗಿದ್ದಾರೆ.

ನಟಿಸಿದ ಸಿನಿಮಾಗಳು: ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು.

ಸುಬ್ಬಯ್ಯ ನಾಯ್ಡು ಅವರ ಭಕ್ತ ಪ್ರಹ್ಲಾದದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು. ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ ಆಗಿದೆ.