ನ್ಯೂಸ್

Baba Siddique: ಹತ್ಯೆ ಪೂರ್ವ ನಿಯೋಜಿತ: ಬಿಷ್ಣೋಯ್ ಗ್ಯಾಂಗ್​ ಕೈವಾಡದ ಶಂಕೆ

Webdesk - Narayanaswamy

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ, ಎನ್ ಸಿಪಿ ನಾಯಕ ಬಾಬಾ ಸಿದ್ದಿಕ್(Baba Siddique) ಹತ್ಯೆ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಮಧ್ಯೆ ಮುಂಬೈ ಪೊಲೀಸರು ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಹಲವು ಮಹತ್ವದ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ.

ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪೂರ್ವ ಯೋಜಿತ ಎಂದು ಪೊಲೀಸರು ತಿಳಿಸಿದ್ದಾರೆ. ಸಂಭವನೀಯ ಸುಪಾರಿ ಕೊಲೆ, ವ್ಯಾಪಾರ ವೈಷಮ್ಯ ಸೇರಿದಂತೆ ವಿವಿಧ ಕೋನಗಳಿಂದ ಅಪರಾಧ ವಿಭಾಗವು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಬಾ ಸಿದ್ದಿಕಿ ಮೇಲೆ ಮೂವರು ಗುಂಡಿನ ದಾಳಿ ನಡೆಸಿದ್ದಾರೆ. 24 ಗಂಟೆಯೊಳಗೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಮೂರನೇ ಆರೋಪಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮುಂಬೈ ಕ್ರೈಂ ಬ್ರಾಂಚ್ ನಿರ್ಮಲ್ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಲಾಗಿದೆ.

ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಮಧ್ಯೆ, ಈ ಕೊಲೆ ಪ್ರಕರಣದ ಬಗ್ಗೆ ಪೊಲೀಸರು ಹಲವು ಮಹತ್ವದ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ಆರೋಪಿಗಳು ಮುಂಬೈನಲ್ಲಿ ಕೆಲಕಾಲ ಇದ್ದು, ಸಿದ್ದಿಕಿ ಮೇಲೆ ತೀವ್ರ ನಿಗಾ ಇರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂದ್ರಾದ ನಿರ್ಮಲ್ ನಗರದ ಬಳಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಬಣದ ನಾಯಕ ಸಿದ್ದಿಕಿ ಮೇಲೆ ಶನಿವಾರ ತಡರಾತ್ರಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.