ನ್ಯೂಸ್

ಪ್ರಜಲ್ವ ಪ್ರಕರಣದ ಬಗ್ಗೆ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಿ

Bengaluru - Political - Vilas Melagiri

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆಯಿಂದ ಇರಿ. ಇಲ್ಲವಾದರೆ 41 ಎ ಅಡಿ ನೋಟಿಸ್ ಕೊಟ್ಟು ವಿಚಾರಣೆಗೆ ಕರೆದು ನೀಡಿದ ಹೇಳಿಕೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಎಚ್ಚರಿಸಿದರು.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಪ್ರತಿಯೊಬ್ಬರು ನೀಡುವ ಹೇಳಿಕೆಗೂ ಉತ್ತರಿಸಲಾಗುವುದಿಲ್ಲ. ಈ ಪ್ರಕರಣದಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಅಂದುಕೊಂಡಿದ್ದೇನೆ. ಇನ್ನು ಮುಂದೆ ಯಾವುದೇ ಹೇಳಿಕೆಗಳನ್ನು ಕೊಡುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

ಎಸ್‌ಐಟಿ ವಿದೇಶಕ್ಕೆ ಹೋಗುವುದಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ವಿಶೇಷ ತನಿಖಾ ದಳದ ಅಧಿಕಾರಿಗಳು ವಿದೇಶಕ್ಕೆ ತೆರಳಲು ಅವಕಾಶವಿಲ್ಲ ಎಂದು ಹೇಳಿದರು.

ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗಲು ಅವಕಾಶವಿಲ್ಲ. ಪ್ರಜ್ವಲ್ ಬಂಧನಕ್ಕೆ ಸಂಬಂಧಿಸಿದಂತೆ ಈಗಾಗಲೇ ಬ್ಲ್ಯೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ. ಇಂಟರ್ ಪೋಲ್ ಸಂಸ್ಥೆಯವರು ಪ್ರಜ್ವಲ್ನ ಚಲನವಲನ ಗಮನಿಸಿ ಎಲ್ಲಿದ್ದಾರೆ ಎಂದು ಪತ್ತೆ ಹಚ್ಚಿ ಅದನ್ನು ಸಿಬಿಐಗೆ ತಿಳಿಸುತ್ತಾರೆ. ಅಲ್ಲಿಂದ ನಮ್ಮ ತನಿಖಾ ಸಂಸ್ಥೆಗಳಿಗೆ ಮಾಹಿತಿ ಬರುತ್ತದೆ. ಈವರೆಗೂ ಪ್ರಜ್ವಲ್ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ತಿಳಿಸಿದರು.

ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಈ ಹಂತದಲ್ಲಿ ತನಿಖೆಯ ಮೇಲೆ ಪರಿಣಾಮ ಬೀರುವ ಯಾವುದೇ ವಿಚಾರ ಅಥವಾ ಮಾಹಿತಿಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದರು.

ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡರನ್ನು ಈಗಾಗಲೇ ಬಂಧಿಸಲಾಗಿದೆ. ಮುಂದಿನ ಕ್ರಮಗಳ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ಮಾಹಿತಿ ಇರುತ್ತದೆ. ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿಗೆ ಭಯ ಶುರುವಾಗಿದೆ

ಲೋಕಸಭೆ ಚುನಾವಣೆಯ ಬಗ್ಗೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಮೋದಿಯವರು ಹತಾಶರಾಗಿದ್ದಾರೆ. ಆರಂಭದಲ್ಲಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದರು. ಇದ್ದಕ್ಕಿದ್ದಂತೆ 300ಕ್ಕೆ ಇಳಿದಿದರು. ಈಗ ಮತ್ತೆ 400 ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ. ಜನ ಸಾಮಾನ್ಯರು ಭಾವನೆಯ ಸುಳಿವು ಅವರಿಗೆ ಸಿಕ್ಕಿದಂತಿದೆ. ಅದಕ್ಕಾಗಿ ಹತಾಶರಾಗಿ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ಬಗ್ಗೆ ನಮಗೆ ಯಾವ ಸಂಬಂಧವೂ ಇಲ್ಲ ಎಂದು ಡಾ.ಪರಮೇಶ್ವರ ಪ್ರತಿಕ್ರಿಯಿಸಿದರು.