ನ್ಯೂಸ್

ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿ : ಮೈಸೂರು ಡಿಸಿ ಲಕ್ಷ್ಮೀಕಾಂತ್ ರೆಡ್ಡಿ ಸೂಚನೆ

ಮೈಸೂರು: ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನದಿಗೆ ನೀರು ಹರಿಯ ಬಿಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರಸ್ತುತ ಪ್ರವಾಹ ಪರಿಸ್ಥಿತಿ ಉದ್ಬವಾಗಿದ್ದು, ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಪ್ರವಾಹ ಪೀಡಿತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರಾಜಸ್ವ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ವಾಸವಿದ್ದು ಪರಿಸ್ಥಿತಿ ಅವಲೋಕಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಸೇತುವೆ ಮುಳುಗಡೆಯಾಗುವ ಕಡೆ ವಾಹನಗಳ ಹಾಗೂ ಸಾರ್ವಜನಿಕರ ಪ್ರವೇಶ ನಿರ್ಭಂಧಿಸಲು ಸೂಕ್ತ ಬ್ಯಾರಿಕೇಡ್ ಅಳವಡಿಸಿ ನಿಗಾ ವಹಿಸಲು ಪೊಲೀಸ್ ಹಾಗೂ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸುವಂತೆ ಸೂಚನೆ ನೀಡಿದ್ದಾರೆ.

ಪ್ರವಾಹದ ಸಮಯದಲ್ಲಿ ನದಿಪಾತ್ರಗಳಲ್ಲಿ ಮುಳುಗಡೆಯಾಗಬಹುದಾದ, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಿ ಅವರ ಮನವೊಲಿಸಿ ಸ್ಥಳಾಂತರಿಸಬೇಕು. ಒಂದು ವೇಳೆ ಒಪ್ಪದಿದ್ದಲ್ಲಿ ಒತ್ತಾಯ ಪೂರ್ವಕವಾಗಿ ಸುರಕ್ಷಿತ ಸ್ಥಳಗಳಿಗೆ ಅಥವಾ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲು ಕ್ರಮ ವಹಿಸಬೇಕು. ಈ ಬಗ್ಗೆ ಡಂಗೂರ ಸಾರುವ ಮೂಲಕ ಹೆಚ್ಚು ಪ್ರಚಾರ ಮಾಡಬೇಕು. ಯಾವುದೇ ಪರಿಸ್ಥಿತಿಯಲ್ಲೂ ಜೀವ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.