ಪೆರಿಂಥಲಮನ್ನ: ಕೇರಳದ ಮಲ್ಲಪುರಂ ಜಿಲ್ಲೆಯ ಪೆರಿಂಥಲಮನ್ನದಲ್ಲಿರುವ ಎಂಇಎಸ್ ಅಕಾಡೆಮಿ ಆಫ್ ಮೆಡಿಕಲ್ ಸೈನ್ಸ್ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಭೀಕರ ರಸ್ತೆ ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದಾಳೆ. ಈ ವರ್ಷ ಎಂಬಿಬಿಎಸ್ ಮುಗಿಸಿ ಜನರ ಸೇವೆ ಸಜ್ಜಾಗುವ ಆಸೆಯಲ್ಲಿದ್ದ ವಿದ್ಯಾರ್ಥಿನಿ ಅಕಾಲಿಕ ಮರಣ ಹೊಂದಿದ್ದಾಳೆ.
ಮೃತಳನ್ನು ಅಲ್ಫೋನ್ಸಾ (22) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ 6.50ರ ಸುಮಾರಿಗೆ ಥಿರುಕಾಡ್ನಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಮೃತಪಟ್ಟಳು. ಆಕೆಯ ಜತೆಯಿದ್ದ ತ್ರಿಸ್ಸೂರ್ ಮೂಲದ ಸಹಪ್ರಯಾಣಿಕ ಅಶ್ವಿನ್ (22) ಗಂಭೀರವಾಗಿ ಗಾಯಗೊಂಡಿದ್ದ ಸ್ಥಳೀಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಲೇಜಿಗೆ ತೆರಳುತ್ತಿದ್ದಾಗ ಅಲ್ಫೋನ್ಸಾ ಹಾಗೂ ಅಶ್ವಿನ್ ಪ್ರಯಾಣಿಸುತ್ತಿದ್ದ ಬೈಕ್ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಪೆರಿಂಥಲಮನ್ನ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಲ್ಫೋನ್ಸಾಳ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಮಗಳನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. (ಏಜೆನ್ಸೀಸ್)