ನ್ಯೂಸ್

ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ಬಿಜೆಪಿ ಆಗ್ರಹ

ಬೆಂಗಳೂರು: ವಿಧಾನಸೌಧದಲ್ಲೇ ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಕೂಗಿದ ದುಷ್ಕರ್ಮಿಗಳ ಕೂಡಲೇ ಬಂಧನ, ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ, ಶಾಸಕರ ಭವನದಿಂದ ವಿಧಾನಸೌಧವರೆಗೆ ಕಾಲ್ನಡಿಗೆ ಜಾಥಾ ಬುಧವಾರ ನಡೆಸಿತು.

ರಾಷ್ಟ್ರ ವಿದ್ರೋಹಿ ಘಟನೆ ಬಗ್ಗೆ ಬಿಜೆಪಿ ದೂರು ಸಲ್ಲಿಸಿದೆ. ವಿಧಾನಸೌಧ ಠಾಣೆ ಪೊಲೀಸರು ಸ್ವಯಂಪ್ರೇರಿತ ದಾವೆ ಹೂಡಿ ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ ರೀತಿಯಲ್ಲಿ ಸಂದೇಶ ಹಂಚಿಕೊಂಡಿದ್ದರೆ, ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ನಾಸೀರ್ ಹುಸೇನ್ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು‌.

ಕಾಂಗ್ರೆಸ್ ನಾಯಕರು ಯಾರ ಕಿವಿಮೇಲೆ ಹೂವು ಇಡಲು ಹೊರಟಿದ್ದಾರೆ. ರಾಷ್ಟ್ರದ ಸಮಗ್ರತೆ, ಏಕತೆ ವಿಚಾರದಲ್ಲೂ ರಾಜಕಾರಣ ಬೆರೆಸುವುದು ಸರಿಯಲ್ಲ. ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ನೆರೆದ ಗುಂಪಿನ ನಡುವಿನಿಂದ ಪಾಕ್ ಪರ ಜಿಂದಾಬಾದ್ ಘೋಷಣೆ ಮೊಳಗಿಸಿರುವುದು ಸ್ಪಷ್ಟವಾಗಿ ಕೇಳಿಸಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರದ ಹಿತವನ್ನು ಕಡೆಗಣಿಸಿ ಓಲೈಕೆ ರಾಜಕಾರಣಕ್ಕೆ ಇಳಿದಿರುವ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕು. ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸುತ್ತಿದ್ದೇವೆ. ಬೆಂಗಳೂರು ಮಾತ್ರವಲ್ಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೋರಾಟ ನಡೆಯುತ್ತಿದೆ. ಮುಂದಿನ ಬೆಳವಣಿಗೆಗೆ ಕಾಂಗ್ರೆಸ್ ಸರ್ಕಾರವೇ ಹೊಣೆಯಾಗಲಿದೆ ಎಂದು ಕಾಲ್ನಡಿಗೆ ಜಾಥಾ ನೇತೃತವಹಿಸಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಸಿದರು.

ಕಾಲ್ನಡಿಗೆಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷ ಮುಖ್ಯ ಸಚೇತಕರಾದ ಎನ್.ರವಿಕುಮಾರ್, ದೊಡ್ಡನಗೌಡ ಪಾಟೀಲ್, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್, ವಿ.ಸುನಿಲ್ ಕುಮಾರ್, ಮಹೇಶ್ ಟೆಂಗಿನಕಾಯಿ, ಪ್ರಭು ಚವ್ಹಾಣ್ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.