ನ್ಯೂಸ್

ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ: CM ಆಕ್ರೋಶ

ಬಾಬುಪ್ರಸಾದ್​ ಮೋಡಿಸ್​

ಗದಗ (ರೋಣಾ): ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM) ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಮಾತನಾಡಿದರು.

1,20,000 ಕೋಟಿ ಹಣವನ್ನು ಈ ವರ್ಷ ರಾಜ್ಯ ಸರ್ಕಾರ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52,000 ಕೋಟಿ ರೂ. ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗಿದ್ದೂ ಬಿಜೆಪಿ ಬುರುಡೆ ಬಿಡುತ್ತಿದೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಪದೇಪದೆ ಸುಳ್ಳು ಹೇಳಿ ಅವರ ಸುಳ್ಳನ್ನು ಸತ್ಯ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನತೆ ಇವರ ಸುಳ್ಳು ನಂಬುವಷ್ಟು ಮೂರ್ಖರಲ್ಲ ಎಂದರು.

ರಾಜ್ಯದ 4.5 ಕೋಟಿ ಮಂದಿ ಗ್ಯಾರಂಟಿ ಯೋಜನೆಗಳ ನೇರ ಲಾಭ ಪಡೆಯುತ್ತಿದ್ದಾರೆ. ಇದಲ್ಲದೆ ರಸ್ತೆ, ನೀರು, ಕೃಷಿ, ನೀರಾವರಿ ಯೋಜನೆಗಳಿಗೂ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿದ್ದೇವೆ. ಸಮಾಜ ಕಲ್ಯಾಣಕ್ಕೆ, ದಲಿತ ಸಮುದಾಯದ ಪ್ರಗತಿಗೆ, ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಸಾವಿರ ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದೇವೆ. ಆದರೆ, ಬಿಜೆಪಿ ಜಾತಿ-ಧರ್ಮದ ನಡುವೆ ದ್ವೇಷ ಹರಡಿ, ಜನರನ್ನು ವಿಭಜಿಸುವ ಏಕೈಕ ರಾಜಕಾರಣದಲ್ಲಿ ತೊಡಗಿದೆ ಎಂದರು.

ಬಸವಣ್ಣ, ಅಂಬೇಡ್ಕರ್, ಗಾಂಧಿ, ಬುದ್ಧ ಎಲ್ಲರ ಆಶಯದಂತೆ ಸಮ ಸಮಾಜವನ್ನು ಸೃಷ್ಟಿಸುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ, ಜಾರಿ ಮಾಡುತ್ತಿದೆ. ಆದರೆ ಸಮಾಜದಲ್ಲಿರುವ ಅಸಮಾನತೆಯ ಅತಿಹೆಚ್ಚು ಲಾಭ ಪಡೆಯುತ್ತಿರುವ ಬಿಜೆಪಿ, ಸಮಾನತೆಯ ವಿರೋಧಿಯಾಗಿದೆ ಎಂದರು.

ಗಜೇಂದ್ರಘಡದ ಅತ್ತೆ ಸೊಸೆ ಇಬ್ಬರೂ ಗೃಹಲಕ್ಷ್ಮಿ ಹಣವನ್ನು ಉಳಿಸಿ ಅದರಲ್ಲಿ ಬೋರ್ ವೆಲ್ ಕೊರೆಸಿ ಸಮಾಜಕ್ಕೆ ಮಾದರಿ ಆಗಿದ್ದಾರೆ ಎಂದು ಸ್ಮರಿಸಿದ ಸಿಎಂ ಅತ್ತೆ-ಸೊಸೆ ಜೋಡಿಗೆ ಅಭಿನಂದನೆ ಸಲ್ಲಿಸಿದರು.

ಜೆ.ಎಸ್.ಪಾಟೀಲರು ಮಂತ್ರಿ ಆಗಲು ಅರ್ಹರು

ಜೆ.ಎಸ್.ಪಾಟೀಲ್ ಅವರು ನನ್ನ ಬಳಿ ಬರುವುದು ರೋಣಾ ಮತ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಮಾತ್ರ. ಮುಂದಿನ ಬಜೆಟ್ ನಲ್ಲಿ ಕ್ಷೇತ್ರಕ್ಕೆ ಕೃಷಿ ಕಾಲೇಜು ನೀಡುವಂತೆ ಪಾಟೀಲರು ಒತ್ತಾಯಿಸಿದ್ದಾರೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನತೆ ಒತ್ತಾಯಿಸಿದ್ದಾರೆ. ಎರಡೂ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು. ಜೆ.ಎಸ್.ಪಾಟೀಲರಿಗೆ ಮಂತ್ರಿ ಆಗುವ ಎಲ್ಲಾ ಅರ್ಹತೆಗಳಿವೆ. ಮುಂದೆ ನೋಡೋಣ ಎಂದು ಸಿಎಂ ಭರವಸೆ ನೀಡಿದರು.