ನ್ಯೂಸ್

ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ | Converted into people movement warn

ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲು ಸೌಲಭ್ಯ ನೀಡಲು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿರುವುದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ದಿಢೀರ್ ಪ್ರತಿಭಟನೆ ಸೋಮವಾರ ನಡೆಸಿತು.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಜಮಾಯಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ನೀಡಬೇಕು ಇಲ್ಲವೇ ಸಂಪುಟದಿಂದ ಅವರನ್ನು ಸಿಎಂ ವಜಾಗೊಳಿಸಬೇಕು ಎಂದು ಅಗ್ರಹಿಸಿದರು.

ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ಸಂವಿಧಾನ ವಿರೋಧಿ ಕಾಂಗ್ರೆಸ್ ಪಕ್ಷದವೆಂದು ದೂರಿದರು. ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹನ ಮಾಡಿ ಆಕ್ರೋಶ ಹೊರ ಹಾಕಿದರು.

ಕಾಂಗ್ರೆಸ್ ಸದಾ ವಿರೋಧಿ

ಪ್ರತಿಭಟನಾಕಾರರನ್ನು ಉದ್ದೇಶಿಸಿ ಪಕ್ಷದ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ ಕಾಂಗ್ರೆಸ್ ಪಕ್ಷ ಯಾವತ್ತೂ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನದ ಪರವಿಲ್ಲ. ಇತಿಹಾಸದ ಪುಟದಲ್ಲಿ ಸಾಕಷ್ಟು ನಿದರ್ಶನಗಳಿವೆ ಎಂದು ದೂರಿದರು.

ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಡಿ.ಕೆ.ಶಿವಕುಮಾರ್ ಅವರಿಗೆ ಗೌರವವಿದ್ದರೆ ಕೂಡಲೇ ರಾಜೀನಾಮೆ ನೀಡಿ, ದೇಶದ ಜನತೆಯ ಕ್ಷಮೆಯಾಚಿಸಬೇಕು. ಇದನ್ನು ಜನಾಂದೋಲನವಾಗಿ ರೂಪಿಸಲು ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹನದ ಮೂಲಕ ಸಾಂಕೇತಿಕವಾಗಿ ಶುರು ಮಾಡಿದ್ದೇವೆ ಎಂದು ಎಚ್ಚರಿಸಿದರು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಮಾತನಾಡಿ ಜೈಭೀಮ್ ಎನ್ನುವ ಕಾಂಗ್ರೆಸ್‌ನವರ ಮುಖವಾಡ ಕಳಚಿ ಬಿದ್ದಿದೆ. ದೇಶ ವಿರೋಧಿ ಶಕ್ತಿಗಳ ಜತೆಗೆ ಸೇರಿಸಿ ಭಾರತದಲ್ಲಿ ಅಭದ್ರತೆ ಸೃಷ್ಟಿಸುತ್ತಿದೆ. ನಾವು ಏನೋ ಒಂದು ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಸಂವಿಧಾನವನ್ನೇ ಕಿತ್ತು ಹಾಕುತ್ತೇವೆ ಎಂಬ ಅರ್ಥದಲ್ಲಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂದು ಆರೋಪಿಸಿದರು.

ಈ ಪ್ರತಿಭಟನೆಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಅನಿಲ್‌ಕುಮಾರ್, ಎಸ್‌ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕೌತಾಳ, ಉಪಾಧ್ಯಕ್ಷ ಹೂಡಿ ಮಂಜುನಾಥ, ಪಕ್ಷದ ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿಗೌಡ, ಮುಖಂಡರು, ಕಾರ್ಯಕರ್ತರು ಇದ್ದರು.