ತಿ.ನರಸೀಪುರ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ತಿ.ನರಸೀಪುರ ಬಿಜೆಪಿ ಮಂಡಲದ ವತಿಯಿಂದ ಜೂ.20ರಂದು ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇವಸ್ಥಾನದ ಬಳಿ ರಸ್ತೆ ಸಂಚಾರ ತಡೆ ನಡೆಸಲಾಗುತ್ತದೆ ಎಂದು ವಿಧಾನಸಭಾ ಚುನಾವಣೆ ಬಿಜೆಪಿ ಪರಾಜಿತ ಅಭ್ಯರ್ಥಿ ಡಾ.ರೇವಣ್ಣ ಹೇಳಿದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸರ್ಕಾರ ಸಮರ್ಥವಾಗಿ ಆಡಳಿತ ನಡೆಸಲು ವಿಫಲವಾಗಿದೆ. ಸರ್ಕಾರ ಚುನಾವಣಾ ಪೂರ್ವ ನೀಡಿದ ಭರವಸೆ ಈಡೇರಿಲ್ಲ. ಸರ್ಕಾರದ ಆಡಳಿತ ವೈಖರಿ ಹಾಗೂ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನತೆಯ ಕಷ್ಟ, ಸುಖಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ದಿನ ಬಳಕೆಯ ವಸ್ತುಗಳ ಬೆಲೆ ಕಡಿಮೆ ಮಾಡಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ಶಿವಕುಮಾರ್(ಸತ್ಯಪ್ಪ), ಕಾರ್ಯದರ್ಶಿ ರಾಮಚಂದ್ರ, ಎಸ್.ಸಿ. ಮೋರ್ಚಾ ಅಧ್ಯಕ್ಷ ಅನಿಲ್, ಪುರಸಭೆ ಸದಸ್ಯ ಎಸ್.ಕೆ.ಕಿರಣ್, ಎನ್.ಲೋಕೇಶ್, ಶಿವಕುಮಾರ್, ರಾಜಶೇಖರ್, ಕುರುಬೂರು ಶಿವಶಂಕರ್ ಇತರರು ಇದ್ದರು.