ಸೊರಬ: ರಕ್ತದಾನ ಮಾಡುವುದರಿಂದ ಆರೋಗ್ಯ ಪಡೆಯುವ ಜತೆಗೆ ಸಮಾಜದಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದು ಗ್ರಾಪಂ ಉಪಾಧ್ಯಕ್ಷ ಎಂ.ಬಿ.ರೇಣುಕಪ್ರಸಾದ್ ಹೇಳಿದರು.
ಚಂದ್ರಗುತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಕ್ತದಾನ ಮಾಡುವುದರಿಂದ ಮನಸ್ಸಿಗೆ ತೃಪ್ತಿ ದೊರಕುತ್ತದೆ. ಯುವಕರು ರಕ್ತದಾನದ ಮಹತ್ವ ತಿಳಿದುಕೊಳ್ಳಬೇಕು. ವೈದ್ಯರು ಮತ್ತು ಸಾರ್ವಜನಿಕರ ನಡುವಿನ ಬಾಂಧವ್ಯ ವೃದ್ಧಿಯಾಗಬೇಕು. ನಂಬಿಕೆ, ಪರಸ್ಪರ ಗೌರವವನ್ನು ಆಧಾರಿಸುವ ವೈದ್ಯರು ಕೇವಲ ಚಿಕಿತ್ಸೆ ನೀಡುವುದಷ್ಟೇ ಅಲ್ಲ, ಸಮುದಾಯದ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು. ಗ್ರಾಪಂ ಅಧ್ಯಕ್ಷೆ ಸರಿತಾ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಮೆಗ್ಗಾನ್ ರಕ್ತ ನಿಧಿ ವೈದ್ಯಾಧಿಕಾರಿಗಳಾದ ಭರತ್, ಭೂಮಿಕಾ, ಚಂದ್ರಗುತ್ತಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಚಂದನ್, ಪಿಡಿಒ ನಾರಾಯಣಮೂರ್ತಿ, ಸುರೇಂದ್ರ ಗೌಡ ಇತರರಿದ್ದರು.