ನ್ಯೂಸ್

ಹೊತ್ತಿ ಉರಿದ ಬಿಎಂಟಿಸಿ ಬಸ್

ಮಂಜುನಾಥ.ಕೆ

ಬೆಂಗಳೂರು: ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿದೆ.

ಸೋಮವಾರ ಬೆಳಗ್ಗೆ ೫.೧೫ ರ ಸುಮಾರಿಗೆ ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ಹೋಗುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ೫೦ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು.ಈ ಬಸ್ ನಗರದ ಎಚ್‌ಎಎಲ್ ಮುಖ್ಯದ್ವಾರದ ಬಳಿ ಬರುತ್ತಿದ್ದಂತೆ ಬಸ್ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣ ಬಸ್‌ನ್ನು ರಸ್ತೆ ಬದಿ ನಿಲ್ಲಿಸಿದ್ದು, ನಿರ್ವಾಹಕರು ಪ್ರಯಾಣಿಕರನ್ನು ಕೆಳಗೆ ಇಳಿಸುವ ಮೂಲಕ ಭಾರೀ ದುರಂತವನ್ನು ತಪ್ಪಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಬೆಂಕಿ ಇಡೀ ಬಸ್‌ಗೆ ಆವರಿಸಿಕೊಂಡು ಹೊತ್ತಿ ಉರಿದಿದ್ದು, ಸುದ್ದಿ ತಿಳಿದು ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರಾದರೂ ಬಸ್ ಸುಟ್ಟು ಕರಕಲಾಗಿದೆ. ಈ ಬಗ್ಗೆ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.