ನ್ಯೂಸ್

ಲಂಚ ಆರೋಪ ಪತ್ರ: ಮಾಜಿ ಹಾಲಿ ಸಿಎಂಗಳ ಮಧ್ಯೆ ವಾಗ್ಯುದ್ಧ

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚ ನೀಡುವಂತೆ ಒತ್ತಾಯಿಸಿದ್ದಾರೆಂಬ ಆರೋಪಿಸಿ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ಬರದಿದ್ದಾರೆ ಎನ್ನಲಾಗುವ ಪತ್ರ ಈಗ ಹಾಲಿ ಮತ್ತು ಮಾಜಿ ಸಿಎಂಗಳ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಈ ವಿಷಯ ಪ್ರಸ್ತಾಪಿಸಿ ಸಿಎಂ ಸಿದ್ದರಾಮಯ್ಯ ಅವರನ್ನು ವೈಯಕ್ತಿಕವಾಗಿ ಗುರಿ ಮಾಡಿ ಹಿಗ್ಗಾಮುಗ್ಗ ತರಾಟೆ ತೆಗೆದುಕೊಂಡಿದ್ದಾರೆ. ಅದಕ್ಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ ಎಂದು ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ಇನ್ನು ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ-ಅಸಲಿ ವಿಚಾರ ಶೀಘ್ರದಲ್ಲಿಯೇ ತನಿಖೆಯಿಂದ ಹೊರಬೀಳಲಿದೆ ಎಂದು ಕುಮಾರಸ್ವಾಮಿ ವಿರುದ್ಧ ಟೀಕಾಸ ಪ್ರಯೋಗಿಸಿದ್ದಾರೆ.

ಕುಮಾರಸ್ವಾಮಿ ಟೀಕೆ ಏನು?

ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ. ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಚಾಟಿ ಬೀಸಿದ್ದಾರೆ.