ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದರೆ, ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.
ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ಧತಿಗೆ ಮತ್ತು ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಶುಕ್ರವಾರ ಪ್ರಕಟಿಸಿತು.
ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿ ಪುರಸ್ಕರಿಸಲಾಗಿದೆ ಎಂದು ಪೀಠ ತೀರ್ಪು ನೀಡಿದೆ. ಪ್ರಕರಣದ ತನಿಖೆ, ಅಂತಿಮ ವರದಿ ಸಲ್ಲಿಕೆ ಎಲ್ಲವೂ ಮುಂದುವರೆಯಲಿದೆ ಎಂದು ಹೇಳಿದೆ.
ತಾಂತ್ರಿಕ ಕಾರಣಕ್ಕೆ ಈ ಪ್ರಕರಣವನ್ನು ಪೋಕ್ಸೋ ಕೋರ್ಟ್‌ಗೆ ಪುನಃ ಮರಳಿಸಿದೆ. ಹೀಗಾಗಿ ಯಡಿಯೂರಪ್ಪ ಪೋಕ್ಸೋ ಕೋರ್ಟ್‌ನಲ್ಲಿ ವಿಚಾರಣೆ ಎದುರಿಸಬೇಕಿದೆ.