ನ್ಯೂಸ್

Bus Accident | ಆಂಧ್ರದ ಕರ್ನೂಲ್​ ಬಳಿ ಬಸ್​​ ಮತ್ತು ಬೈಕ್​ ಮುಖಾಮುಖಿ; 11 ಜನ ಸಜೀವ ದಹನ

Amaravati: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೇಕೂರ್ ಬಳಿ ಶುಕ್ರವಾರ ಬೆಳಗಿನ ಜಾವ ಖಾಸಗಿ ಬಸ್​​ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ (Bus Accident) ಪರಿಣಾಮ ಬೆಂಕಿ ಹೊತ್ತಿಕೊಂಡು 11 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆ ಬೆಳಗಿನ ಜಾವ 3:30 ರ ಸುಮಾರಿಗೆ ಸಂಭವಿಸಿದೆ ಎನ್ನಲಾಗಿದ್ದು, ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಾರಿ ಬೆಂಕಿ ಹೊತ್ತಿಕೊಂಡಿದ್ದು, ಅದು ಬೇಗನೆ ಇಡೀ ವಾಹನವನ್ನು ಆವರಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ವರದಿಗಳ ಪ್ರಕಾರ ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಸುಮಾರು 40 ಜನ ಪ್ರಯಾಣಿಕರಿದ್ದರು. ಈ ಪೈಕಿ 18 ಪ್ರಯಾಣಿಕರನ್ನು ಜೀವಂತವಾಗಿ ಗುರುತಿಸಲಾಗಿದ್ದು, ಅಂದಾಜು 10 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಲವಾರು ಶವಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅವರನ್ನು ಪತ್ತೆ ಹಚ್ಚುವುದು ಕಷ್ಟಕರವಾಗಿದೆ ಎಂದು ಪೊಲೀಸ್​​ ಮೂಲಗಳು ತಿಳಿಸಿವೆ. ಮೊದಲು ಬಸ್ಸಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ವೇಗವಾಗಿ ಬಸ್​ಗೆ ಹರಡಿದೆ. ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದಂತೆ, ಸುಮಾರು 12 ಪ್ರಯಾಣಿಕರು ತುರ್ತು ನಿರ್ಗಮನ ದ್ವಾರವನ್ನು ಮುರಿದು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ...

ಆಂದ್ರಪ್ರದೇಶದಲ್ಲಿ ನಡೆದ ಘಟನೆ ದುರದೃಷ್ಟಕರ, ದುಃಖಿತ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸುದ್ದಿ ಕೇಳಿ ಆಘಾತವಾಗಿದೆ ಎಂದು ಆಂದ್ರ ಸಿಎಂ..

ಕರ್ನೂಲ್ ಜಿಲ್ಲೆಯ ಚಿನ್ನಾ ಟೇಕೂರ್ ಗ್ರಾಮದ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದ ಸುದ್ದಿ ತಿಳಿದು ನನಗೆ ಆಘಾತವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ಗಾಯಗೊಂಡವರು ಮತ್ತು ಸಂತ್ರಸ್ತ ಕುಟುಂಬಗಳಿಗೆ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲಿದ್ದಾರೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಘಟನೆಯ ಕುರಿತಾಗಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.(ಏಜೆನ್ಸೀಸ್​)