ಅಸ್ಸಾಂ: ಎಸ್‌ಯುವಿ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಸೋಮವಾರ (ಅ.30) ವರದಿಯಾಗಿದೆ.
ಜಿಲ್ಲೆಯ ಗುಲಿಯನ್‌ಪಾರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 17 ರಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ಗುವಾಹಟಿಯಿಂದ ಗೋಲ್‌ಪಾರಾಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಎಸ್‌ಯುವಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.
ಮೃತರೆಲ್ಲರೂ ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಪ್ರಯಾಣಿಕರು ರೋಂಗ್‌ಜುಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪ್ರಯಾಣಿಕನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಗುವಾಹಟಿಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ,(ಏಜೆನ್ಸೀಸ್).