ನ್ಯೂಸ್

52 ಮಕ್ಕಳಿದ್ದ ಶಾಲಾ ಬಸ್​ ಅಪಘಾತ; ಇಬ್ಬರು ವಿದ್ಯಾರ್ಥಿನಿಯರು ಮೃತ್ಯು

ಜೈಪುರ: ದಟ್ಟವಾದ ಮಂಜಿನಿಂದ 52 ಮಕ್ಕಳಿದ್ದ ಶಾಲಾ ಬಸ್​ ಕಲ್ಲಿದ್ದಲು ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ.

ಸುಮೇರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ 52 ಶಾಲಾ ವಿದ್ಯಾರ್ಥಿಗಳನ್ನು ಹೊತ್ತ ಬಸ್ ಶಿಕಾರ್‌ಪುರ ಕಡೆಗೆ ತೆರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿರುವ ಕನಿಷ್ಠ 11 ಶಾಲಾ ಮಕ್ಕಳು, ಮೂವರು ಶಿಕ್ಷಕರು ಮತ್ತು ಬಸ್ ಚಾಲಕನನ್ನು ಚಿಕಿತ್ಸೆಗಾಗಿ ಶಿಯೋಗಂಜ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಟ್ರಕ್ ಚಾಲಕನ ವಿರುದ್ಧ ನಿರ್ಲಕ್ಷ್ಯಕ್ಕಾಗಿ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪಘಾತಕ್ಕೆ ಕಾರಣ ದಟ್ಟವಾದ ಮಂಜಿನಿಂದಾಗಿ ರಸ್ತೆ ಕಾಣಿಸಿದ್ದರಿಂದ ರಸ್ತೆಯ ಬದಿಯಲ್ಲಿ ನಿಂತಿದ್ದ ಕಲ್ಲಿದ್ದಲು ತುಂಬಿದ ಟ್ರಕ್‌ಗೆ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.