ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ತಾಕೀತು ಮಾಡಿದರು.
ಅಧಿಕಾರಕ್ಕೇ ಬಂದಾಗಿಂದಲೂ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲೆ, ತಾಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ ಯಾಕೆ? ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯನವರೇ, ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು. ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ!! ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಕಿಡಿಕಾರಿದ್ದಾರೆ.
ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೆ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಎಂದು ರಾಜ್ಯ ಸರ್ಕಾರವನ್ನು ಕೆಣಕಿದ್ದಾರೆ.
ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.