ನ್ಯೂಸ್

ಕೆಂಪುಕೋಟೆಯ ಬಳಿ ಕಾರು ಸ್ಪೋಟ ದುರಂತ: ಮೃತರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ| PM Modi

ನವದೆಹಲಿ: ಸೋಮವಾರ(ನ. 10) ಸಂಜೆ 6.30ರ ಸುಮಾರಿಗೆ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ಘಟನೆ ಬಗ್ಗೆ ಪ್ರಧಾನಿ ಮೋದಿ(PM Modi) ಮಾಹಿತಿ ಪಡೆದಿದ್ದು, ಘಟನೆಯಲ್ಲಿ ಮೃತಪಟ್ಟರಿಗೆ ಸಂತಾಪ ಸೂಚಿಸದ್ದು, ಗಾಯಾಳುಗಳು ಬೇಗನೇ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಇಂದು ಸಂಜೆ ದೆಹಲಿಯಲ್ಲಿ ನಡೆದ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಜಿ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಸ್ಫೋಟದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇನ್ನೂ ಹಲವರಿಗೆ ತೀವ್ರ ನಿಗಾ ಘಟನದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನು ಹೆಚ್ಚಳವಾಗುವ ಸಾಧ್ಯತೆ ಇದೆ. ಸ್ಫೋಟಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ನಂತರ ಪಕ್ಕದಲ್ಲಿದ್ದ 7 ರಿಂದ 8 ವಾಹನಗಳು ಸಹ ಬೆಂಕಿಗೆ ಆಹುತಿಯಾಗಿವೆ. ಸುಮಾರು 20 ಅಗ್ನಿಶಾಮಕದಳ ವಾಹನಗಳು ಧಾವಿಸಿ ಬೆಂಕಿಯನ್ನು ನಂದಿಸಿವೆ. (ಏಜೆನ್ಸೀಸ್)