ನ್ಯೂಸ್

ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ; ಒಂದೇ ಕುಟುಂಬದ 6 ಮಂದಿ ದುರ್ಮರಣ!

ತಮಿಳುನಾಡು: ಬುಧವಾರ (ಸೆ.06) ಮುಂಜಾನೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಬಂದ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ಸೇಲಂನಲ್ಲಿ ವರದಿಯಾಗಿದೆ.

ಅಪಘಾತದಲ್ಲಿ ಒಂದು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಮೃತರನ್ನು ಪಳನಿಸ್ವಾಮಿ (59), ಪಿ ಪಾಪತಿ (47), ಸೆಲ್ವರಾಜ್ (55), ಮಂಜುಳಾ (42), ಅರುಮುಗಂ (49), ಮತ್ತು ಸಂಜನಾ (1) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಚಾಲಕ ವಿಘ್ನೇಶ್ ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ. ಗಾಯಗೊಂಡವರಲ್ಲಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರಕ್‌ನ ಚಾಲಕ ವಾಹನದ ಪಾರ್ಕಿಂಗ್​ ಸಿಗ್ನಲ್ ಆನ್ ಮಾಡದೆ, ನಿದ್ರಿಸುತ್ತಿದ್ದ. ಈ ವೇಳೆ ಅಪಘಾತ ಸಂಭವಿಸಿದ ಬೆನ್ನಲ್ಲೇ ಲಾರಿ ಚಾಲಕ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ,(ಏಜೆನ್ಸೀಸ್).