ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಹಂಚುವುದಕ್ಕಾಗಿ ದೊಡ್ಡ ಪ್ರಮಾಣದಲ್ಲಿ ದಿನಸಿ ವಸ್ತುಗಳು ಸಂಗ್ರಹ ಮಾಡಿದ ಆರೋಪದಲ್ಲಿ ಮಾಜಿ ಶಾಸಕ ಎಸ್.ಎನ್ ಕೃಷ್ಣಯ್ಯ ಶೆಟ್ಟಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ನ್ನು ಹೈಕೋರ್ಟ್ ರದ್ದುಪಡಿಸಿದೆ.
ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಕೃಷ್ಣಯ್ಯ ಶೆಟ್ಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಸಂಗ್ರಹವಾಗಿದ್ದ ದಿನಸಿ ಸಾಮಗ್ರಿಗಳನ್ನು ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚಿಕೆ ಮಾಡಿಲ್ಲ. ಹೀಗಾಗಿ ಅವರ ವಿರುದ್ಧ ಪ್ರಕರಣ ಮುಂದುವರೆಸುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣಯ್ಯ ಶೆಟ್ಟಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚುವುದಕ್ಕಾಗಿ ಮನೆಯಲ್ಲಿ ದಿನಸಿ ಸಾಮಗ್ರಿಗಳನ್ನು ದಾಸ್ತಾನು ಮಾಡಿದ್ದರೆಂಬ ಆರೋಪ ಕೇಳಿಬಂದಿತ್ತು. ಹೀಗಾಗಿ 2023ರ ಏ.1ರಂದು ಅವರ ಮನೆಯ ಮೇಲೆ ದಾಳಿ ನಡೆಸಿದ್ದ ಚುನಾವಣಾಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.