ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ)ಗಳ ಎಲ್ಲ ಸಿಬ್ಬಂದಿಗೆ ಗರಿಷ್ಠ ಐದು ಲಕ್ಷ ರೂ.ವರೆಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಅನುಷ್ಠಾನಕ್ಕೆ ಕ್ರಮವಹಿಸಬೇಕು ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದರು.
ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರ್‌ಗಳ ಸಂಘದ ವಜ್ರಮಹೋತ್ಸವ ಸಂವಹನ ಉಪನ್ಯಾಸ ಹಾಗೂ ಸಂಘದ 2025ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ ಸಮಾರಂಭ ಉದ್ಘಾಟಿಸಿ, ತಾಂತ್ರಿಕ ದಿನಚರಿ ಮತ್ತು ಕ್ಯಾಲೆಂಡರ್ ಸೋಮವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸೆಸ್ಕ್) ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ. ಉಳಿದ ಎಸ್ಕಾಂಗಳಲ್ಲೂ ಶೀಘ್ರವೇ ಈ ಸೌಲಭ್ಯವನ್ನು ತ್ವರಿತವಾಗಿ ಜಾರಿಗೊಳಿಸಬೇಕು ಎಂದು ತಿಳಿಸಿದರು.
ಇಲಾಖೆಯಲ್ಲಿ ಹಿರಿತನದ ಆಧಾರದ ಮೇಲೆ ಬಡ್ತಿ, ಹುದ್ದೆಗಳ ಭರ್ತಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ ಇಲಾಖೆ ಪ್ರಗತಿ ಜತೆಗೆ ಜನರಿಗೆ ಸಮರ್ಪಕ ವಿದ್ಯುತ್ ಪೂರೈಸಲು ಶ್ರಮಿಸುತ್ತಿರುವ ಇಂಧನ ಇಲಾಖೆಯ ಅಧಿಕಾರಿಗಳು, ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಕೆ.ಜೆ.ಜಾರ್ಜ್ ಭರವಸೆ ನೀಡಿದರು.
ರೈತರಿಗೆ ಸೌರ ಪಂಪ್‌ಸೆಟ್‌ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆ ಜತೆಗೆ ಫೀಡರ್‌ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‌ಸೆಟ್‌ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಪೂರೈಸುವ ಕುಸುಮ್- ಸಿ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಮೊದಲ ಹಂತದ ಯೋಜನೆ ಪ್ರಗತಿಯಲ್ಲಿದ್ದು, 2ನೇ ಹಂತದಲ್ಲಿ ಫೀಡರ್‌ಮಟ್ಟದ ಸೌರೀಕರಣ ಮೂಲಕ 1200 ಮೆಗಾವಾಟ್ ವಿದ್ಯುತ್ ಉತ್ಪಾದಿಸಿ ರೈತರಿಗೆ ನೀಡಲು ನಿರ್ಧರಿಸಲಾಗಿದೆ. ಈ ಯೋಜನೆಯನ್ನು ವೇಗವಾಗಿ ಪೂರ್ಣಗೊಳಿಸಿದರೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಬಹುತೇಕ ಬಗೆಹರಿಯುತ್ತದೆ ಎಂದು ಸಲಹೆ ನೀಡಿದರು.
ವಿದ್ಯುತ್ ಉತ್ಪಾದನೆ ಜತೆಗೆ ಅದನ್ನು ಶೇಖರಣೆ ಮಾಡಿ ಅಗತ್ಯ ಸಂದರ್ಭದಲ್ಲಿ ಜನರಿಗೆ ಒದಗಿಸಲು ಸರ್ಕಾರ ಯೋಜನೆ ರೂಪಿಸಿದೆ. ಅದರಂತೆ ಶರಾವತಿಯಲ್ಲಿ 2000 ಮೆ.ವಾ. ಮತ್ತು ವಾರಾಹಿಯಲ್ಲಿ 1500 ಮೆ.ವಾ. ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ.
ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಿದಂತೆ ಶೇಖರಣಾ ವ್ಯವಸ್ಥೆಯ ಅಗತ್ಯವಿದೆ. ವಿದ್ಯುತ್ ಬೇಡಿಕೆ, ಬಳಕೆ, ಪೂರೈಕೆ ನಡುವೆ ಸಮತೋಲನ ಹಾಗೂ ಉತ್ತಮಗುಣಮಟ್ಟ ಕಾಯ್ದುಕೊಳ್ಳಲು, ಲಭ್ಯ ಹಸಿರು ಇಂಧನ ಸಮರ್ಪಕ ಬಳಕೆಯಲ್ಲಿ ಪಂಪ್ಡ್ ಸ್ಟೋರೇಜ್ ಮಹತ್ವದಪಾತ್ರವಹಿಸುತ್ತವೆ ಎಂದು ಕೆ.ಜೆ.ಜಾರ್ಜ್ ಹೇಳಿದರು.
ಸೆಸ್ಕ್ ಅಧ್ಯಕ್ಷ ಎ.ರಮೇಶ್‌ಬಂಡಿಸಿದ್ದೇಗೌಡ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ್ ಖಾದ್ರಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಪಿಸಿಕೆಎಲ್ ವ್ಯವಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್ ಸುಧಾಕರ್,ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಸಿ.ಶೀಲಾ, ಕೆಇಬಿ ಇಂಜಿನಿಯರ್‌ಗಳ ಗಳ ಸಂಘದ ಪದಾಧಿಕಾರಿಗಳು ಇದ್ದರು.