ನ್ಯೂಸ್

ಜಾತಿ ಗಣತಿ ವಿಚಾರದಲ್ಲಿ ಬಿಜೆಪಿ ನಾಯಕರು ಮನುವಾದಿ ಮನಸ್ಥಿತಿ ಹೊಂದಿದ್ದಾರೆ: CM ಸಿದ್ದರಾಮಯ್ಯ ವಾಗ್ದಾಳಿ

ಬಾಬುಪ್ರಸಾದ್​ ಮೋಡಿಸ್​

ಜಾತಿ ಗಣತಿ ವಿಚಾರದಲ್ಲಿ ಬಿಜೆಪಿ ನಾಯಕರು ಮನುವಾದಿ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು CM ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘’ಸಬ್ ಕಾ ಸಾಥ್ ಸಬ್ ಕಾ ವಿಕಾಸ್'' ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆ ನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ 7 ಕೋಟಿ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ. ಆದರೆ, ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಎಲ್ಲವೂ ಯಥಾಸ್ಥಿತಿಯಲ್ಲಿಯೇ ಇರಬೇಕು. ಬಡವರು ಬಡವರಾಗಿಯೇ ಉಳಿಯಬೇಕು, ಹಿಂದುಳಿದವರು ಹಿಂದೆಯೇ ಉಳಿಯಬೇಕು. ಮಹಿಳೆಯರು ಅವಕಾಶ ವಂಚಿತರಾಗಿಯೇ ಇರಬೇಕು. ವರ್ಣ ಮತ್ತು ವರ್ಗಗಳ ನಡುವಿನ ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ. ಬಿಜೆಪಿಯ ನಾಯಕರ ಅಂತರಂಗದಲ್ಲಿರುವುದು ಇದೇ ಮನುವಾದಿ ಮನಸ್ಥಿತಿ ಎಂದು ಸಿಎಂ ಟೀಕಿಸಿದ್ದಾರೆ.

ಜಾತಿ ಗಣತಿ: ಬಿಜೆಪಿಯವರಿಗೆ ಬೇಡವಾಗಿದೆ

ನಮ್ಮ ಸರ್ಕಾರ ನಡೆಸುವ ಸಮೀಕ್ಷೆಯಿಂದ ಕೇವಲ ದಲಿತ, ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸ್ಥಿತಿ-ಗತಿ ಮಾತ್ರವಲ್ಲ, ಮುಂದುವರಿದ ಜಾತಿಗಳೊಳಗಿನ ಬಡವರು ಮತ್ತು ಅವಕಾಶ ವಂಚಿತರ ಸ್ಥಿತಿಗತಿಯೂ ಗೊತ್ತಾಗಲಿದೆ. ಈ ವಾಸ್ತವಸ್ಥಿತಿ ಅರಿವಾಗುವುದು ಬಿಜೆಪಿಯವರಿಗೆ ಬೇಡವಾಗಿದೆ. ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಪ್ರತಿಯೊಂದು ಜಾತಿ ಮತ್ತು ಧರ್ಮದೊಳಗಿನ ಉಳ್ಳವರ ಕೈಯಲ್ಲಿಯೇ ಇರಬೇಕು ಎನ್ನುವುದೇ ಅವರ ವಿರೋದಧ ಹಿಂದಿನ ದುರುದ್ದೇಶ ಎಂದು ಕುಟುಕಿದ್ದಾರೆ.

ಬಿಹಾರದಲ್ಲಿ ಇವರದ್ದೇ ಮೈತ್ರಿ ಸರ್ಕಾರ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದೇ ರೀತಿ ತೆಲಂಗಾಣದಲ್ಲಿಯೂ ನಡೆದಿದೆ. ಅಲ್ಲಿಯೂ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡಿದ್ದಾರೆ. ಇವೆಲ್ಲಕ್ಕಿಂತಲೂ ಮಿಗಿಲಾಗಿ ಈಗ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಜಾತಿ ಗಣತಿ ಮಾಡಲು ಹೊರಟಿದೆ. ಕರ್ನಾಟಕದಲ್ಲಿ ಜಾತಿಗಳನ್ನು ಪರಿಗಣಿಸಿ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರೇ, ನೀವು ಕೇಂದ್ರ ಸರ್ಕಾರದ ಜಾತಿ ಗಣತಿಯನ್ನೂ ವಿರೋಧಿಸುತ್ತೀರಾ? ಹಾಗೆ ವಿರೋಧಿಸುವುದಾದರೆ ಅದನ್ನು ಗಟ್ಟಿ ದನಿಯಲ್ಲಿ ಈಗಲೇ ಹೇಳಿಬಿಡಿ. ಪ್ರಧಾನಿಯ ಎದುರು ತಲೆ ಎತ್ತಿ ಮಾತನಾಡುವ ದಮ್ಮು-ತಾಕತ್ತು ಇಲ್ಲದ ನಿಮಗೆ ಇದನ್ನು ವಿರೋಧಿಸುವ ಧೈರ್ಯ ಇದೆಯೇ? ಯಾಕೆ ತಮ್ಮ ಮೂರ್ಖತನದ ಹೇಳಿಕೆಗಳ ಮೂಲಕ ರಾಜ್ಯದ ಪ್ರಜ್ಞಾವಂತ ಜನರ ಎದುರು ನಗೆಪಾಲಿಗೀಡಾಗುತ್ತಿದ್ದೀರಿ? ಎಂದು ವ್ಯಂಗ್ಯವಾಡಿದ್ದಾರೆ.