ನ್ಯೂಸ್

ಜಾತಿ ಗಣತಿ ನನ್ನ ಕನಸಿನ ಕೂಸು: ಸಿಎಂ ಸಿದ್ದರಾಮಯ್ಯ | Caste Census

ಮೋಹನ್​ ಶೆಟ್ಟಿ

ಬೆಂಗಳೂರು: “ಜಾತಿ ಜನಗಣತಿ (Caste Census) ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ” ಎಂಬ ವಿರೋಧಪಕ್ಷದ ನಾಯಕರಾದ ಆರ್​. ಅಶೋಕ ಅವರ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು. ಅಶೋಕ್ ಅವರೇ, ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ, ಅವುಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ನೀವು ನುಡಿದಂತೆ ನಡೆದರೆ ಜಾತಿ ಜನಗಣತಿ ಜಾರಿಯಾಗಿ ನೀವೇ ಹೇಳಿಕೊಂಡಿರುವ ನಿಮ್ಮ ಪಕ್ಷದ ಕನಸಿನ 'ಅಂತ್ಯೋದಯ’ ಸಾಕಾರಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ. ನೀವು ಮಾತ್ರ, ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

"2018ರಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೂ ಅಂಕಿಅಂಶಗಳ ಪರಿಶೀಲನಾ ಕಾರ್ಯ ಪೂರ್ಣಗೊಳ‍್ಳದೆ ಇದ್ದ ಕಾರಣ ಆ ಅವಧಿಯಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಇದಕ್ಕೆ ಬೇರೆ ಯಾವ ಕಾರಣಗಳು ಇರಲಿಲ್ಲ. ಈಗ ವರದಿ ಬಿಡುಗಡೆಗೆ ಸಿದ್ಧವಾಗಿದೆ. ಅದನ್ನು ಅಂಗೀಕರಿಸಲು ನಮ್ಮ ಪಕ್ಷ ಮತ್ತು ಸರ್ಕಾರ ಕೂಡಾ ಬದ್ಧವಾಗಿದೆ. ಅಶೋಕ ಅವರೇ, ನಮ್ಮ ಪಕ್ಷದ ಎಲ್ಲ ನಾಯಕರು ತಾತ್ವಿಕವಾಗಿ ಜಾತಿಗಣತಿಯನ್ನು ಒಪ್ಪಿಕೊಂಡಿದ್ದಾರೆ. ಯಾರ ವಿರೋಧವೂ ಇಲ್ಲ. ವಿರೋಧ ಪಕ್ಷಗಳ ಸುಳ್ಳು ಪ್ರಚಾರದಿಂದಾಗಿ ಕೆಲವರಲ್ಲಿ ನಿರಾಧಾರವಾದ ಸಂಶಯಗಳು ಹುಟ್ಟಿಕೊಂಡಿವೆ. ಇನ್ನು ಕೆಲವರಲ್ಲಿ ತಪ್ಪು ಅಭಿಪ್ರಾಯಗಳಿಂದಾಗಿ ಗೊಂದಲಗಳಿವೆ. ಮಠಾಧೀಶರು ಸೇರಿದಂತೆ ಎಲ್ಲರ ಅನುಮಾನ-ಸಂಶಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಂಡು ಜಾತಿ ಗಣತಿ ವರದಿಯನ್ನು ಜಾರಿಗೆ ತರುವ ನಿರ್ಧಾರವನ್ನು ಶೀಘ್ರವಾಗಿ ಕೈಗೊಳ್ಳಲಾಗುವುದು" ಎಂದರು.

"ಕಾಂತರಾಜ್ ಆಯೋಗ ನಡೆಸಿದ್ದ ಜಾತಿಗಣತಿಯ ವರದಿ ಇಲ್ಲಿಯವರೆಗೆ ಬಿಡುಗಡೆಯಾಗಿಲ್ಲ. ನಾನು ಕೂಡಾ ಅದನ್ನು ಓದಿಲ್ಲ. ಹೀಗಿರುವಾಗ ಅಶೋಕ್ ​ಅವರು ವರದಿ ಬಿಡುಗಡೆಯಾಗುವ ಮೊದಲೇ ಅದು ವೈಜ್ಞಾನಿಕವಾಗಿ ನಡೆದಿಲ್ಲ, ಅದರಲ್ಲಿ ತಪ್ಪುಗಳಿವೆ ಎಂದು ಆರೋಪಿಸುತ್ತಿದ್ದಾರೆ. ವರದಿ ಅವರಲ್ಲಿದೆಯೇ? ಯಾವ ಆಧಾರದಲ್ಲಿ ಅವರು ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಸ್ಪಷ್ಟಪಡಿಸಬೇಕು. ಈಗ ಏಕಾಏಕಿಯಾಗಿ ವರದಿಯನ್ನು ಬಿಡುಗಡೆಗೊಳಿಸುವ ನಿರ್ಧಾರ ಯಾಕೆ ಎಂದು ಆರ್. ಅಶೋಕ್ ಕೇಳುತ್ತಿದ್ದಾರೆ. ಇದೇನು ದಿಢೀರ್​ ನಿರ್ಧಾರ ಅಲ್ಲ, ನಮ್ಮ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದ ಇದರ ಬಗ್ಗೆ ಸಮಾಲೋಚನೆ ನಡೆಸುತ್ತಾ ಬಂದಿದ್ದೇವೆ. ನಾವು ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳವರು, ಯಾವುದೇ ಚರ್ಚೆ-ಸಂವಾದ ಇಲ್ಲದೆ ದಿಢೀರ್ ನಿರ್ಧಾರ ಕೈಗೊಳ್ಳುವ ಸರ್ವಾಧಿಕಾರಿ ಧೋರಣೆ ನಮ್ಮದ್ದಲ್ಲ. ಸಾರ್ವಜನಿಕ ತೀರ್ಮಾನಗಳನ್ನು ಸಹಮತ ಮೂಡಿಸುವ ಮೂಲಕ ಕೈಗೊಳ್ಳಬೇಕೆಂಬ ಅಭಿಪ್ರಾಯ ನಮ್ಮದಾಗಿದೆ. ಇದರಿಂದಾಗಿ ಸ್ವಲ್ಪ ವಿಳಂಬವಾಗಿದೆ ಅಷ್ಟೆ" ಎಂದು ಸ್ಪಷ್ಟಪಡಿಸಿದರು.

"ಜಾತಿಗಣತಿಯನ್ನು ರಾಜಕೀಯ ದಾಳವಾಗಿ ಬಳಸುವುದು ದಲಿತರು ಮತ್ತು ಹಿಂದುಳಿದವರಿಗೆ ಮಾಡುವ ಅವಮಾನವಲ್ಲವೇ ಎಂದು ಅಶೋಕ ಅವರು ಅಮಾಯಕರಂತೆ ಪ್ರಶ್ನಿಸಿದ್ದಾರೆ. ಸನ್ಮಾನ್ಯ ವಿಪಕ್ಷ ನಾಯಕರೇ, ನಾನು ಮತ್ತೆ ಮತ್ತೆ ಹೇಳುತ್ತಿದ್ದೇನೆ, ಇದು ಕೇವಲ ಜಾತಿ ಜನಗಣತಿ ಅಲ್ಲ, ಇದು ಸರ್ವರ ಒಳಿತಿಗಾಗಿ ನಡೆಸಲಾದ ರಾಜ್ಯದ ಏಳು ಕೋಟಿ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ. ಇದನ್ನು ಇಲ್ಲಿಯವರೆಗೆ ದಲಿತರಾಗಲಿ, ಹಿಂದುಳಿದ ಜಾತಿಯವರಾಗಲಿ ವಿರೋಧಿಸಿಲ್ಲ. ಹೀಗಿರುವಾಗ ಅವರಿಗೆ ಅವಮಾನವಾಗಿದೆ ಎಂದು ಹೇಗೆ ಹೇಳುತ್ತೀರಿ? ಜಾತಿ ಜನಗಣತಿ ವಿರುದ್ಧ ತಳ ಸಮುದಾಯಗಳನ್ನು ಎತ್ತಿಕಟ್ಟುವ ಉದ್ದೇಶ ನಿಮ್ಮದಾಗಿದ್ದರೆ ನಿಮಗೆ ನಿರಾಶೆ ಖಚಿತ" ಎಂದು ನುಡಿದರು.

"ಜಾತಿ ಗಣತಿ ನನ್ನ ಕನಸಿನ ಕೂಸು ಎಂದು ಹೇಳಲು ಯಾವ ಹಿಂಜರಿಕೆಯೂ ಇಲ್ಲ. 1992ರಲ್ಲಿ ಸುಪ್ರೀಂ ಕೋರ್ಟ್ ಮಂಡಲ ವರದಿಗೆ ಸಂಬಂಧಿಸಿದಂತೆ ನೀಡಿದ್ದ ಆದೇಶದಲ್ಲಿ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಆಯೋಗವನ್ನು ರಚಿಸಿ, ಕಾಲಕಾಲಕ್ಕೆ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಬೇಕು ಎಂದು ಸೂಚಿಸಿತ್ತು. ಇದರಂತೆ 1995ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಜಾತಿಗಳ ಆಯೋಗವನ್ನು ರಚಿಸಿದ್ದೆ. 2014ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಆದೇಶ ನೀಡಿದ್ದೆ. ಇದು ದೇಶದಲ್ಲಿಯೇ ಪ್ರಥಮ ಪ್ರಯತ್ನ ಎಂದು ಹೇಳಲು ನನಗೆ ಹೆಮ್ಮೆಯಿದೆ" ಎಂದರು.