ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ನಗರದ ಕೃಷ್ಣಾದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 7ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ ಎಂದರು.
ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಡಿಸೆಂಬರ್ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ 1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸಲಾಗುವುದು. ಅವರಿಗೆ ರೂ.20ಸಾವಿರವರೆಗೆ ಗೌರವ ಸಂಭಾವನೆ ನೀಡಲಾಗುವುದು. ಶಿಕ್ಷಕರ ಸಂಭಾವನೆಗೆ ರೂ. 325 ಕೋಟಿ ವೆಚ್ಚವಾಗಲಿದೆ.ತಾತ್ಕಾಲಿಕವಾಗಿ ರೂ.420ಕೋಟಿ ಸಮೀಕ್ಷೆ ಕಾರ್ಯಕ್ಕೆ ನಿಗದಿಪಡಿಸಲಾಗಿದೆ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು. ಆಯೋಗ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು ಎಂದರು.
ಇದನ್ನೂ ಓದಿ:ದೆಹಲಿ ಹೈಕೋರ್ಟ್ಗೆ ಬಾಂಬ್ ಬೆದರಿಕೆ! ವಿಚಾರಣೆ ಸ್ಥಗಿತಗೊಳಿಸಿ ಆವರಣವ ತೆರವುಗೊಳಿಸಿದ ಪೋಲಿಸರು | Bomb Threat
2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10ವರ್ಷ ಆದ ಕಾರಣ ಹೊಸ ಮರು ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ ವಹಿಸಲಾಗಿದೆ.ಸ್ವಾತಂತ್ರ್ಯ ದೊರೆತು ಇಷ್ಟು ವರ್ಷಗಳಾದರೂ ಅಸಮಾನತೆಯನ್ನು ಸಂಪೂರ್ಣವಾಗಿ ತೊಲಗಿಸಲು ನಮಗೆ ಸಾಧ್ಯವಾಗಿಲ್ಲ. ಸಮಾನತೆಯನ್ನು, ಸಮಾನ ಅವಕಾಶ ಒದಗಿಸುವ ನಿಟ್ಟಿನಲ್ಲಿ ನಾವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ಸುಮಾರು 7ಕೋಟಿ ಜನಸಂಖ್ಯೆಯಿದ್ದು, ಸುಮಾರು 2ಕೋಟಿಯಷ್ಟು ಕುಟುಂಬಗಳಿವೆ. ಇವರೆಲ್ಲರಿಗೂ ಸಮಾನ ಅವಕಾಶ ಒದಗಿಸುವುದು ನಮ್ಮ ಕರ್ತವ್ಯ ಎಂದು ವಿವರಿಸಿದರು.