ನ್ಯೂಸ್

ಜಾತಿ ಗಣತಿ: ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಿ: CM ಸಿದ್ದರಾಮಯ್ಯ ಸೂಚನೆ

ಬಾಬುಪ್ರಸಾದ್​ ಮೋಡಿಸ್​

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು CM ಸಿದ್ದರಾಮಯ್ಯ ಸೂಚಿಸಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಶುಕ್ರವಾರ ಕೃಷ್ಣಾದಲ್ಲಿ ನಡೆಸಿದ ವಿಡಿಯೊ ಕಾನ್ಫರೆನ್ಸ್ ರಾಜ್ಯದ ವಿವಿಧ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಎಂ ನಡೆಸಿದ ವಿಡಿಯೊ ಕಾನ್ಫರೆನ್ಸ್ ಮುಖ್ಯಾಂಶಗಳು...

1.ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.

2.ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.

3.ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್‌ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು.

4.ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಬೇಕು.ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ‌

5.ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

6.ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು.

7. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು.