ನ್ಯೂಸ್

ಕರೊನಾ ಸೋಂಕಿತರಿಗೂ ಸಿಇಟಿ ಬರೆಯಲು ಅವಕಾಶ

suchetana

ಬೆಂಗಳೂರು: ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಬರೆಯಲು ಕರೊನಾ ಸೋಂಕಿತ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದೆ.

ಸಿಇಟಿ ಪರೀಕ್ಷೆಗೆ ಪ್ರತ್ಯೇಕ 'ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ)' ಪ್ರಕಟಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಮಾಹಿತಿಯನ್ನು ನೀಡಿದೆ. ಕರೊನಾ ಸೋಂಕು ಪೀಡಿತ ವಿದ್ಯಾರ್ಥಿ ಅಥವಾ ಕ್ವಾರಂಟೈರ್‌ನಲ್ಲಿ ಇರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಇದೆ ಎಂದು ತಿಳಿಸಲಾಗಿದೆ.

ಕಂಟೈನ್‌ಮೆಂಟ್‌ ಝೋನ್‌ನಿಂದ ಬರುವ ಸೋಂಕು ಪೀಡಿತರ ನೇರ, ಪ್ರಾಥಮಿಕ ಅಥವಾ ಹೆಚ್ಚಿನ ಅಪಾಯದ ಸಂಪರ್ಕ ಹೊಂದಿರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆಗೆ ಅವಕಾಶ ನೀಡಬೇಕು. ಸೋಂಕು ದೃಢವಾದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಇರಬೇಕು ಎಂದು ಸೂಚನೆ ನೀಡಲಾಗಿದೆ.

ಇಂತಹ ಪರೀಕ್ಷಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾ ಆರೋಗ್ಯ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆಗಳು ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆದೇಶಿಸಲಾಗಿದೆ.

ಸಿಇಟಿಗೆ ಮೀಸಲು ಇರುವ ಯಾವುದೇ ಪರೀಕ್ಷಾ ಕೇಂದ್ರಗಳನ್ನು ಕ್ವಾರಂಟೈನ್‌ ಕೇಂದ್ರವನ್ನಾಗಿ ಬಳಸಲು ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲಾಕೇಂದ್ರದಲ್ಲಿ ಒಂದು ಹೆಚ್ಚುವರಿ ಪರೀಕ್ಷಾ ಕೇಂದ್ರವನ್ನು ಗುರುತಿಸಿ ಕಾಯ್ದಿರಿಸಬೇಕು. ಬೆಂಗಳೂರಿನಲ್ಲಿ ಹೆಚ್ಚು ಪರೀಕ್ಷಾ ಕೇಂದ್ರಗಳಿರುವುದರಿಂದ ನಾಲ್ಕು ಹೆಚ್ಚುವರಿ ಕೇಂದ್ರಗಳನ್ನು ಕಾಯ್ದಿರಿಸಬೇಕು ಎಂದು ತಿಳಿಸಲಾಗಿದೆ.

ಇಷ್ಟೇ ಅಲ್ಲದೇ, ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಇಲ್ಲಿಗೆ ಬಂದು ಪರೀಕ್ಷೆ ಬರೆಯುವವರ ಕುರಿತು ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು, ಅಂತಹ ವಿದ್ಯಾರ್ಥಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸುವುದರಿಂದ ವಿನಾಯಿತಿ ನೀಡಬೇಕು. ಇವರಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡುವಂತೆ ಇಲಾಖೆ ತಿಳಿಸಿದೆ.

ಇದರ ಜತೆ ಈಗಾಗಲೇ ಹೇಳಿರುವಂತೆ ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಗೆ ಮೂರು ದಿನಗಳ ಮೊದಲು ಸೋಂಕು ನಿವಾರಕ ದ್ರಾವಣದ ಮೂಲಕ ಸ್ವಚ್ಛಗೊಳಿಸುವುದು, ಪ್ರತಿದಿನವೂ ಆಯಾ ಪರೀಕ್ಷೆಯ ನಂತರ ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳು, ಪೀಠೋಪಕರಣಗಳನ್ನು ಸ್ಯಾನಿಟೈಸ್‌ ಮಾಡಿಸುವುದು, ಎರಡು ಗಂಟೆ ಮುಂಚಿತವಾಗಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಿರುವುದು, ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಕೊಠಡಿಯಲ್ಲಿ ಗರಿಷ್ಠ 24 ವಿದ್ಯಾರ್ಥಿಗಳನ್ನು ಕೂರಿಸುವುದು ಇತ್ಯಾದಿ ಮಾರ್ಗಸೂಚಿ ಪ್ರಕಟಿಸಲಾಗಿದೆ.